ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಈ ಸೂಚನೆ ನೀಡಿದರು.
“ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.
“ಪಟಾಕಿ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಏನಿದು ಹಸಿರು ಪಟಾಕಿ
ಹಸಿರು ಪಟಾಕಿಗಳನ್ನು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಅಭಿವೃದ್ದಿಪಡಿಸಿದೆ. ಈ ಪಟಾಕಿಯಲ್ಲಿ ಲೀಥಿಯಂ, ಅರ್ಸೆನಿಕ್, ಬೇರಿಯಂ ಹಾಗೂ ಸತು ಸೇರಿದಂತೆ ಹಲವು ರೀತಿಯ ಅಪಾಯಕಾರಿ ರಾಸಾಯನಿಕಗಳನ್ನು ಹೊಂದಿರುವುದಿಲ್ಲ. ಹಸಿರು ಪಟಾಕಿಗಳು ಸಾಮಾನ್ಯ ಪಟಾಕಿಗಿಂತ ಶೇ30ರಷ್ಟು ಕಡಿಮೆ ವಾಯು ಮಾಲಿನ್ಯ ಮಾಡುತ್ತವೆ. ಹಸಿರು ಪಟಾಕಿ ಹೆಚ್ಚು ಶಬ್ಧ ಮಾಡುವುದಿಲ್ಲ. ಹೊಗೆಯ ಬದಲು ನೀರಿನ ಆವಿ ಬಿಡುಗಡೆ ಮಾಡುತ್ತೆ. ಮತ್ತು ಶಬ್ಧ ಮಾಲಿನ್ಯ ಹಾಗೂ ವಾಯು ಮಾಲಿನ್ಯ ಎರಡೂ ಕಡಿಮೆ ಆಗುತ್ತೆ.