ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ವೇಳೆ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾಕಿರುವ ಕೃತ್ಯವು ಸ್ಯಾಟೆಲೈಟ್ ಚಿತ್ರಗಳಿಂದ ಬಯಲಾಗಿದೆ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ.
ಈ ಬಗ್ಗೆ ಮಂಗಳವಾರ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ” ಎಚ್ ಎಂ ಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ ” ಎಂದಿದ್ದಾರೆ.
“ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದು ಖಂಡ್ರೆ ಹೇಳಿದ್ದಾರೆ.
“ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನ ಪೀಣ್ಯ- ಜಾಲಹಳ್ಳಿ ಸರ್ವೆ ನಂ.1 ರಲ್ಲಿಎಚ್‌ಎಂಟಿ ವಶದಲ್ಲಿದ್ದ 5 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ಶುಕ್ರವಾರ (ಅಕ್ಟೋಬರ್ 25) ಮರುವಶಕ್ಕೆ ಪಡೆಯಲಾಗಿತ್ತು. ಬೆಂಗಳೂರು ನಗರ ವಲಯದ ಅಧಿಕಾರಿಗಳು ಸಿಬ್ಬಂದಿ ಹಾಗೂ ಜೆಸಿಬಿ ಯಂತ್ರದ ನೆರವಿನೊಂದಿಗೆ ಖಾಲಿ ಜಾಗವನ್ನು ಮರುವಶಪಡಿಸಿಕೊಳ್ಳುವ ಜತೆಗೆ ಅರಣ್ಯ ಇಲಾಖೆಯ ಫಲಕ ಅಳವಡಿಸುವಲ್ಲಿಯಶಸ್ವಿಯಾಗಿದ್ದರು.