Homeಕರ್ನಾಟಕನಬಾರ್ಡ್‌ನಿಂದ ಸಾಲ ಕಡಿತ | ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿದ್ದರಾಮಯ್ಯ

ನಬಾರ್ಡ್‌ನಿಂದ ಸಾಲ ಕಡಿತ | ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದ್ದಾರೆ.

2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ 35ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿಯನ್ನು ಹೊಂದಿದೆ. 2023-24ನೇ ಹಣಕಾಸು ವರ್ಷದಲ್ಲಿ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ ಕರ್ನಾಟಕದಲ್ಲಿ 22,902 ಕೋಟಿ ರೂ. ಅಲ್ಪಾವಧಿ ಕೃಷಿ ಸಾಲವನ್ನು ವಿತರಿಸಲಾಗಿದೆ.

2024-25ನೇ ಸಾಲಿನಲ್ಲಿ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ 9,162 ಕೋಟಿ ರೂ. ಕೃಷಿ ಸಾಲ ಮಿತಿಗೆ ಅನುಮೋದನೆ ನೀಡುವಂತೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ ನಬಾರ್ಡ್‌ಗೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

2023-24ನೇ ಸಾಲಿನಲ್ಲಿ ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ 5,600 ಕೋಟಿ ರೂ. ಮೊತ್ತದ ರಿಯಾಯಿತಿ ದರದ ಸಾಲದ ಮಿತಿಗೆ ಅನುಮೋದನೆ ನೀಡಿತ್ತು. 2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರೂ, ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ ಕೇವಲ 2,340 ಕೋಟಿ ರೂ. ರಿಯಾಯಿತಿ ದರದ ಸಾಲವನ್ನು ಅನುಮೋದಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ.58ರಷ್ಟು ಕಡಿಮೆಯಾಗಿದೆ. ಆರ್‌ಬಿಐ ಸಾಮಾನ್ಯ ಸಾಲದ ಮಿತಿ (ಎಲ್ಒಸಿ)ಯನ್ನು ಕಡಿಮೆಗೊಳಿಸಿರುವುದೇ ಪ್ರಸ್ತುತ ವರ್ಷ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿಮೆಗೊಳಿಸಲು ಕಾರಣ ಎಂದು ನಬಾರ್ಡ್‌ ಮಾಹಿತಿ ನೀಡಿದೆ.

ನಬಾರ್ಡ್‌ ಕರ್ನಾಟಕ ರಾಜ್ಯಕ್ಕೆ ಅನುಮೋದಿಸಿರುವ ಕೃಷಿ ಸಾಲದ ಮಿತಿ ವಿವರ

ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಾನ್ಸೂನ್‌ ಮಳೆಯಾಗಿದ್ದು, ರೈತರು ಕೃಷಿ ಸಹಕಾರಿ ಚಟುವಟಿಕೆಗಳಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಹೆಚ್ಚಿಸುವಂತೆ ಬೇಡಿಕೆ ಇರಿಸಿದ್ದಾರೆ. ಆದರೆ ಕರ್ನಾಟಕಕ್ಕೆ 2024-25ನೇ ಸಾಲಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿತಗೊಳಿಸಿರುವುದು ಅಲ್ಪಾವಧಿ ಕೃಷಿ ಸಹಕಾರಿ ಸಾಲದ ವಿತರಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಈ ಎಲ್ಲ ಹಿನ್ನೆಲೆಯಲ್ಲಿ, ಕರ್ನಾಟಕದ ರೈತರ ಹಿತದೃಷ್ಟಿಯಿಂದ ಅವರು ಉತ್ತಮ ಬೆಳೆಯನ್ನು ಬೆಳೆಯಲು ಅನುಕೂಲವಾಗುವಂತೆ 2024-25 ನೇ ಸಾಲಿನಲ್ಲಿ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವಂತೆ ನಬಾರ್ಡ್‌ ಹಾಗೂ ಆರ್‌ಬಿಐಗೆ ದಯವಿಟ್ಟು ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಕೋರಿದ್ದಾರೆ.

ಮನವಿ ಸಲ್ಲಿಸುವ ವೇಳೆ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments