ಸಾಫ್ಟ್ವೇರ್ ಇಂಜಿನಿಯರ್ ಅತುಲ್ ಸುಭಾಷ್ (34) ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಮಾರತ್ಹಳ್ಳಿ ಠಾಣೆ ಪೊಲೀಸರ ತಂಡ ಆರೋಪಿಗಳ ವಿಚಾರಣೆ ನಡೆಸಲು ಉತ್ತರ ಪ್ರದೇಶಕ್ಕೆ ತೆರಳಿದೆ.
ಪ್ರಕರಣದ ತನಿಖಾಧಿಕಾರಿಯಾಗಿರುವ ಪಿಎಸ್ಐ ಜ್ಞಾನದೇವ್ ನೇತೃತ್ವದ ತಂಡ ಉತ್ತರ ಪ್ರದೇಶದ ಜೌನ್ ಪುರ್‌ಗೆ ತಲುಪಿದೆ. ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನ ಅನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 108 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಎಫ್ಐಆರ್ ದಾಖಲಾಗಿದೆ. ಅದರನ್ವಯ ಉತ್ತರ ಪ್ರದೇಶದತ್ತ ತೆರಳಿರುವ ಪೊಲೀಸರ ತಂಡ, ಮೊದಲು ನೋಟಿಸ್ ಜಾರಿಗೊಳಿಸಿ ಮೃತನ ಪತ್ನಿಯ ವಿಚಾರಣೆ ನಡೆಸಲಿದೆ. ವಿಚಾರಣೆಗೆ ಸಹಕರಿಸದಿದ್ದರೆ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ. ಬಳಿಕ ಬಿಹಾರಕ್ಕೆ ತೆರಳಲಿರುವ ಪೊಲೀಸರು, ಅತುಲ್ ಸುಭಾಷ್ ಅವರ ಪೋಷಕರು, ಸಹೋದರನಿಂದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.
ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಡಿಸೆಂಬರ್ 9ರಂದು ಮಾರತ್ ಹಳ್ಳಿಯ ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಮಾರು 24 ಪುಟಗಳ ಡೆತ್ ನೋಟ್ ಬರೆದಿಟ್ಟು, ಸಾವಿನ ಬಳಿಕ ಮೃತದೇಹ ಗಮನಿಸುವವರಿಗೆ ವ್ಯವಸ್ಥಿತವಾಗಿ ಸೂಚನೆಗಳನ್ನು ನೀಡಿ ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿತ್ತು.
ಆತ್ಮಹತ್ಯೆ ಪರಿಹಾರವಲ್ಲ
ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ – 04424640050 (24×7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ – 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).