Homeಕರ್ನಾಟಕಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ | ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿ ಕೆ ಶಿವಕುಮಾರ್

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ | ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿ ಕೆ ಶಿವಕುಮಾರ್

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಗಳ ಜೊತೆ ಮಾತನಾಡಿ, “1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್ ಲಾಲ್ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು” ಎಂದು ತಿಳಿಸಿದರು.

“ಅಲ್ಲಿಂದ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ನಮ್ಮ ಹೋರಾಟ ಮಾಡಿದೆವು. ನಂತರ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರ್ಕಾರ ಸ್ಥಾಪಿಸಿದೆವು. ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ” ಎಂದರು.

“ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, “ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು” ಎಂದು ತಿಳಿಸಿದರು.

ದೇಶದಾದ್ಯಂತ ಎಷ್ಟು ಜನ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ ಎಂದು ಕೇಳಿದಾಗ, “ಕಾಂಗ್ರೆಸ್‌ನ ಪ್ರಮುಖ 500ರಿಂದ 600 ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ಟಿಳಕವಾಡಿಯ ವೀರಸೌಧವನ್ನು ಅಂದಗೊಳಿಸಲಾಗುತ್ತಿದೆ. ಡಿ.26, 27ರಂದು ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments