ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸರಸ್ವತಿ (24) ಮೃತ ಬಾಣಂತಿ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ಗುರುತಿಸಲಾಗಿದೆ.
ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್‌ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರಿದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬಸ್ಥರ ತೀವ್ರ ದುಃಖದಲ್ಲಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಹೊಸ ವರ್ಷದ ಮೊದಲ ದಿನವೇ ಬಾಣಂತಿಯೊಬ್ಬರು ಮೃತರಾಗಿದ್ದರು. ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದ ಬಾಣಂತಿ ಹಾಗೂ ಶಿಶು ಚಿಕಿತ್ಸೆಗೆ ಸ್ಫಂದಿಸದೇ ರಿಮ್ಸ್ (ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದ್ದರು.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಸೀದಾಪೂರ ಗ್ರಾಮದ ಶಿವಲಿಂಗಮ್ಮ (22) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಚೊಚ್ಚಲ ಹೆರಿಗೆಯ ಸಮಯದಲ್ಲಿಯೇ ಬಾಣಂತಿ ಸಾವನ್ನಪ್ಪಿದ್ದಾರೆ. ಅವರನ್ನು ಮಾನವಿ ಆಸ್ಪತ್ರೆಯಿಂದ ಡಿಸೆಂಬರ್ 27ರಂದು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಡಿಸ್ಚಾರ್ಜ್ ಮಾಡಿ ಬೇರೆಡೆ ಕರೆದೊಯ್ಯುತ್ತೇವೆ ಎಂದು ಪೋಷಕರು ಹೇಳಿದರೂ ರಿಮ್ಸ್ ಆಸ್ಪತ್ರೆ ವೈದ್ಯರು ಡಿಸ್ಚಾರ್ಜ್ ಮಾಡಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆಕೆಯ ಸಾವಿಗೆ ರಿಮ್ಸ್ ಆಸ್ಪತ್ರೆ ವೈದ್ಯರೇ ಕಾರಣ ಎಂದು ಶಿವಲಿಂಗಮ್ಮ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಸಿಂಧನೂರು ತಾಲೂಕು ಆಸ್ಪತ್ರೆಗೆ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ನಾಲ್ವರು ಬಾಣಂತಿಯರು ಸಿಸೇರಿಯನ್ ಬಳಿಕ ಮೃತಪಟ್ಟಿದ್ದರು. ರಾಯಚೂರು ಜಿಲ್ಲೆಯವರೇಯಾದ ಮೌಸಂಬಿ ಮಂಡಲ್, ಚನ್ನಮ್ಮ, ಚಂದ್ರಕಲಾ, ರೇಣುಕಮ್ಮ ಮೃತ ಬಾಣಂತಿಯರು. ಈ ನಾಲ್ವರು ಬಾಣಂತಿಯರಿಗೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗಿದ್ದ IVದ್ರಾವಣವೇ ನೀಡಲಾಗಿತ್ತು ಎನ್ನಲಾಗಿದೆ.
ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಎಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ? ಇವರ ಸಾವಿಗೆ ಕಾರಣವೇನು? ಎಂಬುವುದರ ಕುರಿತು ಸಮಗ್ರವಾಗಿ ತನಿಖೆ ನಡೆಸುತ್ತಿದ್ದು, ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದೆ.