ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಮತ್ತು ಮುಡಾದಿಂದ ಕಡತಗಳನ್ನು ತೆಗೆದುಕೊಂಡು ಹೋಗಿರುವ ಆರೋಪದ ಮೇಲೆ ಸಚಿವ ಬೈರತಿ ಸುರೇಶ್ ಅವರಿಗೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್ನಲ್ಲಿ ತಿಳಿಸಿದೆ.
ಇ.ಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಅವರು ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.