ರೋಗಿಯು ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಜಾರಿಗೆ ತರಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಆದೇಶ ಪ್ರತಿ ಹಂಚಿಕೊಂಡಿದ್ದಾರೆ.
ಈ ಮೂಲಕ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಘನತೆಯಿಂದ ಸಾಯುವ ಹಕ್ಕನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಸರ್ಕಾರ ಜಾರಿ ಮಾಡಿದೆ.
“ನಮ್ಮ ರಾಜ್ಯದ ಆರೋಗ್ಯ ಇಲಾಖೆಯು ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್ನ ನಿರ್ದೇಶನವನ್ನು ಜಾರಿಗೆ ತಂದಿದೆ. ಮರಣ ಇಚ್ಛೆಯ ಉಯಿಲು ಅಥವಾ ಲಿವಿಂಗ್ ವಿಲ್ ಸಹ ಹೊರತಂದಿದೆ. ಇದರಲ್ಲಿ ರೋಗಿಯು ಭವಿಷ್ಯದಲ್ಲಿ ತಮ್ಮ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ತಮ್ಮ ಇಚ್ಛೆಯನ್ನು ದಾಖಲಿಸಬಹುದು” ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.