ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅವರ ಕುಟುಂಬದ ಸದಸ್ಯರು ಹಾಗೂ ಸಂಬಂಧಿಗಳು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಜಮೀನುಗಳನ್ನು ಕಬಳಿಸಿರುವ ಆರೋಪದ ಕುರಿತು ತನಿಖೆಗೆ ನಡೆಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಹಾನ್ ಅದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್ ಅವರನ್ನು ಎಸ್ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಕುಮಾರಸ್ವಾಮಿ ಮತ್ತವರ ಸಂಬಂಧಿಕರು ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ. ಕೋರ್ಟ್ ಸೂಚನೆ ಹೊರತಾಗಿಯೂ ಒತ್ತುವರಿ ತೆರವು ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಎಸ್ ಆರ್ ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡು, 14 ಎಕರೆ ಸರ್ಕಾರಿ ಜಮೀನನ್ನು ಎರಡು ವಾರದಲ್ಲಿ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್ಗಳಲ್ಲಿ ಇವರೆಲ್ಲರೂ 110.32 ಎಕರೆ ಪೈಕಿ ಸುಮಾರು 54 ಎಕರೆಯಷ್ಟು ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ.