ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಘಟನೆ ಬಗ್ಗೆ ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು” ಎಂದು ಭರವಸೆ ನೀಡಿದ್ದಾರೆ.
ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ ಪರಮೇಶ್ವರ
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಮನೆ ಬಿಟ್ಟು ಹೋಗಿರುವುದಕ್ಕೆ, ಯುವಕನ ತಾಯಿಯ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ನಡೆಸಿರುವ ವಿಚಾರ ತಿಳಿದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿದರು.
ಈ ವೇಳೆ ಸಂತ್ರಸ್ತೆಯು ತಡರಾತ್ರಿ ನಡೆದ ಘಟನೆಯನ್ನು ನೆನೆದು ಸಚಿವರ ಮುಂದೆ ಕಣ್ಣೀರು ಹಾಕಿದರು. “ನಿಮ್ಮ ಕುಟುಂಬದ ರಕ್ಷಣೆಗೆ ಹಾಗೂ ನೆರವಿಗೆ ನಾವಿದ್ದೇವೆ. ಎದೆಗುಂದಬೇಡಿ” ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಖುದ್ದಾಗಿ ಸಂತ್ರಸ್ತೆಗೆ ಧೈರ್ಯ ಹೇಳಿದರು.
ಬಳಿಕ ವಂಟಮೂರಿ ಗ್ರಾಮದ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಯಲ್ಲಿದ್ದ ಸಂತ್ರಸ್ತೆಯ ತಾಯಿಯನ್ನು ಖುದ್ದಾಗಿ ಮಾತನಾಡಿಸಿ ಘಟನೆಯ ಕುರಿತು ಮಾಹಿತಿ ಪಡೆದರು. ‘ರಾತ್ರಿ ಮೂರು ಗಂಟೆಯ ಸುಮಾರಿಗೆ ಮನೆಗೆ ನುಗ್ಗಿದ್ದರು. ಮಗಳನ್ನು ಕಂಬಕ್ಕೆ ಕಟ್ಟಿಹಾಕಿ ವಿವಸ್ತ್ರಗೊಳಿಸಿ ಥಳಿಸಿದರು. ಮನೆಬಿಟ್ಟು ಹೋಗಬೇಕೆಂದುಕೊಂಡಿದ್ದೇವೆ’ ಎಂದು ನೋವನ್ನು ಹೊರಹಾಕಿದರು.
ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, “ಯುವತಿಯ ಸಂಬಂಧಿಕರು ಯುವಕನ ಮನೆಗೆ ನುಗ್ಗಿ, ಆತನ ತಾಯಿಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅಮಾನುಷ ಕೃತ್ಯ. ಇದು ಸಮಾಜಕ್ಕೆ ಗೌರವ ತರುವುದಿಲ್ಲ. ಇಂತಹ ಅಕ್ಷಮ್ಯ ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪಿತಸ್ಥರು ಯಾರೇ ಆಗಿದ್ದರು ಮುಲಾಜಿಲ್ಲದೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಭರವಸೆ ನೀಡಿದರು.
“ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಎಫ್‌ಐಆರ್ ದಾಖಲಿಸಿ, ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ಸಂತ್ರಸ್ತರ ಕುಟುಂಬಕ್ಕೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಈ ಬಗ್ಗೆ ತೀವ್ರ ನಿಗಾವಹಿಸುವಂತೆ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. ಯುವಕ-ಯುವತಿಯನ್ನು ಪತ್ತೆಹಚ್ಚಿ ರಕ್ಷಣೆ ನೀಡಲಾಗುವುದು. ತಪ್ಪಿತಸ್ಥರಿಗೆ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು” ಎಂದರು.