ರಾಜ್ಯ ರಾಜಧಾನಿ ಬೆಂಗಳೂರು ಇಂದು ಐಟಿ ಬಿಟಿ ಸಿಟಿ ಎಂದು ಕರೆಸಿಕೊಳ್ಳುತ್ತಿರುವುದರ ಹಿಂದೆ ಎಸ್ ಎಂ ಕೃಷ್ಣ ಅವರ ಪಾತ್ರ ಮಹತ್ವದ್ದಾಗಿದೆ. ತಮ್ಮ ಅನನ್ಯವಾದ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿಗೆ ಎಸ್ ಎಂ ಕೃಷ್ಣ ಭಾಜನರಾಗಿದ್ದರು. ಅವರ ರಾಜಕೀಯ ಯಶೋಗಾಥೆ ಇಲ್ಲಿದೆ..
ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಇಹಲೋಕ ಯಾತ್ರೆ ಮುಗಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದ ಅವರಿಗೆ 93 ವರ್ಷ ವಯಸ್ಸಾಗಿತ್ತು.
ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಮೃತರ ಗೌರವಾರ್ಥ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌವರಗಳೊಂದಿಗೆ ನೆರವೇರಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್ ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ಬೆಂಗಳೂರಿನ ರೇಣುಕಾಚಾರ್ಯ ಅಂತಾರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಎಸ್ ಎಂ ಕೃಷ್ಣ ಅವರು ಪ್ರೊಫೆಸರ್ ಆಗುವ ಮೂಲಕ ವೃತ್ತಿ ಜೀವನ ಆರಂಭಿಸಿದ್ದರು. 1962ರಲ್ಲಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿ, ರಾಜಕೀಯ ಪ್ರವೇಶಿಸಿದ್ದರು. 1962ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ಇದರ ಬೆನ್ನಲ್ಲೇ ಪ್ರಜಾ ಸೋಷಿಯಲಿಸ್ಟ್ ಪಕ್ಷವನ್ನು ಸೇರಿದ ಎಸ್.ಎಂ. ಕೃಷ್ಣ 1968ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಸಹ ಸ್ಪರ್ಧಿಸಿ ವಿಜಯಶಾಲಿಯಾದರು. ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಎಸ್.ಎಂ. ಕೃಷ್ಣ 1971ರ ಮಂಡ್ಯ ಲೋಕಸಭಾ ಕ್ಷೇತ್ರದ ಮರು ಚುನಾವಣೆಯಲ್ಲೂ ಗೆಲುವಿನ ನಗೆ ಬೀರಿದರು. 1983-84ರ ನಡುವೆ ಇಂದಿರಾಗಾಂಧಿ ಸರ್ಕಾರದಲ್ಲಿ ಹಾಗೂ 1984-85ರ ಅವಧಿಯಲ್ಲಿ ರಾಜೀವ್ ಗಾಂಧಿ ಸರ್ಕಾರದಲ್ಲಿ ಕೈಗಾರಿಕೆ ಮತ್ತು ಹಣಕಾಸು ರಾಜ್ಯ ಸಚಿವರಾಗಿಯೂ ಎಸ್.ಎಂ. ಕೃಷ್ಣ ಸೇವೆ ಸಲ್ಲಿಸಿದ್ದರು.
1984ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಇವರು 1989ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ಉಪ ಮುಖ್ಯಮಂತ್ರಿ ಹಾಗೂ ಸ್ಪೀಕರ್ ಹುದ್ದೆ ಅಲಂಕರಿಸುತ್ತಾರೆ. 1994ರ ವಿಧಾನಸಭೆ ಚುನಾವಣೆಯಲ್ಲಿ ಪರಾಜಯ ಹೊಂದಿದ ಎಸ್ ಎಂ ಕೃಷ್ಣ, 1996ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು ಬಳಿಕ ರಾಜ್ಯಸಭಾ ಸದಸ್ಯರಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳ್ಳುತ್ತಾರೆ.
ರಾಜಕೀಯ ಹಾಗೂ ನಾಯಕತ್ವದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್ ಎಂ ಕೃಷ್ಣ ಅವರು 1999ರಲ್ಲಿ ಪಾಂಚಜನ್ಯ ಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಜತೆಗೆ 1999ರಿಂದ 2004ರವರೆಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ, ಬ್ರಾಂಡ್ ಬೆಂಗಳೂರು ಖ್ಯಾತಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವಲ್ಲಿ ಮಹತ್ವದ ರೂವಾರಿಯಾಗಿ ಹೊರಹೊಮ್ಮಿದ್ದರು.
2004ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಿಂದ ಸ್ಪರ್ಧಿಸಿ ಗೆಲುವು ಸಾಧಿಸುತ್ತಾರೆ. ಪಕ್ಷಕ್ಕೆ ಇವರು ನೀಡಿದ ಕೊಡುಗೆ ಗಮನಿಸಿದ ಹೈಕಮಾಂಡ್ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸುತ್ತದೆ.
2010ರಲ್ಲಿ ಮತ್ತೆ ಸಕ್ರಿಯ ರಾಜಕಾರಣ ಪ್ರವೇಶಿಸುವ ಅವರಿಗೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡುತ್ತದೆ. ಆನಂತರ ಡಾ.ಮನ್‌ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸುತ್ತಾರೆ. 2017ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾಗುವ ಅವರು, ಕೆಲ ತಿಂಗಳಲ್ಲೇ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದರು.
ರಾಜ್ಯ ರಾಜಧಾನಿ ಬೆಂಗಳೂರು ಇಂದು ಐಟಿ ಬಿಟಿ ಸಿಟಿ ಎಂದು ಕರೆಸಿಕೊಳ್ಳುತ್ತಿರುವುದರ ಹಿಂದೆ ಎಸ್ ಎಂ ಕೃಷ್ಣ ಅವರ ಪಾತ್ರ ಮಹತ್ವದ್ದಾಗಿದೆ. ರಾಜ್ಯದಲ್ಲಿ ಮೊದಲ ಪ್ಲೈ ಓವರ್, ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಿದ್ದು ಇವರು ಸಿಎಂ ಆಗಿದ್ದ ಕಾಲದಲ್ಲೇ. ನಂತರ ಐಟಿ ಬಿಟಿ ಕ್ಷೇತ್ರಕ್ಕೂ ಇವರು ಅಗಾದವಾದ ಬೆಂಬಲ ನೀಡಿದರು. ಮುಖ್ಯಮಂತ್ರಿಯಾಗಿದ್ದಾಗ ಐಟಿ ಕಂಪನಿಗಳಿಗೆ ಬೆಂಬಲ ನೀಡಿ ಬೆಂಗಳೂರು ನಗರ ಸಿಲಿಕಾನ್ ವ್ಯಾಲಿ ಎನಿಸಿಕೊಳ್ಳುವಲ್ಲಿ ಭದ್ರ ಬುನಾದಿ ಹಾಕಿದರು. ಅದರ ಫಲ ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಐಟಿ ಸಿಟಿ ಎಂದು ಕರೆಸಿಕೊಳ್ಳುತ್ತಿದೆ.
ಜಾಗತಿಕ ಮಟ್ಟದಲ್ಲೂ ಅನುಭವ ಹೊಂದಿದ್ದ ಎಸ್ ಎಂ ಕೆ 1982ರಲ್ಲಿ ವಿಶ್ವಸಂಸ್ಥೆಯ ಭಾರತೀಯ ನಿಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೇ ವೆಸ್ಟ್ ಮಿನಿಸ್ಟರ್ ಮತ್ತು ಬ್ರಿಟನ್ ನಲ್ಲಿ ನಡೆದ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಸೆಮಿನಾರ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ತಮ್ಮ ಅನನ್ಯವಾದ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿಗೆ ಎಸ್ ಎಂ ಕೃಷ್ಣ ಭಾಜನರಾಗಿದ್ದರು.