Homeಕರ್ನಾಟಕಅನಧಿಕೃತ ಬಡಾವಣೆ, ತೋಟ, ಹೋಂ ಸ್ಪೇ, ರೆಸಾರ್ಟ್‌ ತೆರವಿಗೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ

ಅನಧಿಕೃತ ಬಡಾವಣೆ, ತೋಟ, ಹೋಂ ಸ್ಪೇ, ರೆಸಾರ್ಟ್‌ ತೆರವಿಗೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಪೇ ಮತ್ತು ರೆಸಾರ್ಟ್‌ಗಳ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ.

ಈ ಕುರಿತು ಕ್ರಮ ಕೈಗೊಳ್ಳಲು ಇಲಾಖೆಯ ಕಾರ್ಯದರ್ಶಿಗೆ ಟಿಪ್ಪಣಿ ಬರೆದಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, “ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೆ ಎಚ್ಚರಿಕೆಯ ಗಂಟೆಯಾಗಿವೆ” ಎಂದಿದ್ದಾರೆ.

“ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕು” ಎಂದು ಸಚಿವರು ಸೂಚಿಸಿದ್ದಾರೆ.

“ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ಹೇಳಿದ್ದಾರೆ.

“ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ” ಎಂದು ಸಚಿವರು ಉಲ್ಲೇಖ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments