ನಟ ಯಶ್ ಅವರ ‘ಟಾಕ್ಸಿಕ್’ ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು. ಸೆಟ್ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
‘ಟಾಕ್ಸಿಕ್’ ಚಿತ್ರತಂಡದ ವಿರುದ್ಧ ಅರಣ್ಯ ಕಾಯ್ದೆಯಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ. ಸದ್ಯ ಗೀತು ಮೋಹನ್ ದಾಸ್ ಅವರ ‘ಟಾಕ್ಸಿಕ್ ಚಿತ್ರದ ಚಿತ್ರೀಕರಣ ಮುಂಬಯಿಯಲ್ಲಿ ನಡೆಯುತ್ತಿದೆ.
“ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಿಂದೆ ಹೇಳಿದ್ದರು.
ನಂತರ ಈ ಬಗ್ಗೆ ಹೆಚ್ಎಂಟಿ ಸ್ಪಷ್ಟನೆ ನೀಡಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಹೇಳಿತ್ತು.