Homeಕರ್ನಾಟಕಮೈಸೂರು ಸೋಪ್ಸ್‌ಗೆ ನಟಿ ತಮನ್ನಾ ರಾಯಭಾರಿ, ಕರವೇಯಿಂದ ವಿರೋಧ

ಮೈಸೂರು ಸೋಪ್ಸ್‌ಗೆ ನಟಿ ತಮನ್ನಾ ರಾಯಭಾರಿ, ಕರವೇಯಿಂದ ವಿರೋಧ

ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಮೈಸೂರು ಸ್ಯಾಂಡಲ್‌ ಸೋಪ್‌ಗೆ ರಾಯಭಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಿಲ್ಕಿ ಬ್ಯೂಟಿ ಎಂದೇ ಕರೆಯಲಾಗುವ ತಮನ್ನಾ ಅವರು ನಟನೆ ಮತ್ತು ಮೋಹಕ ನೋಟ ಹಾಗೂ ಮಾದಕ ನೃತ್ಯದ ಮೂಲಕ ಕಳೆದ ಕೆಲ ವರ್ಷಗಳಿಂದ ಸಿನಿರಂಗದಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್‌ಗೆ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ತಮನ್ನಾ ಭಾಟಿಯ ಇವರನ್ನು 2 ವರ್ಷ ಮತ್ತು ಎರಡು ದಿನಗಳ ಅವಧಿಗೆ ರೂ.6.20 ಕೋಟಿ ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಸರ್ಕಾರ ಈ ನಡೆಗೆ ಕರವೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

“ಮೈಸೂರು ಸೋಪ್ಸ್ ಸಂಸ್ಥೆ ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದರು. ಈ ಕಂಪನಿಯು ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ” ಎಂದು ಪ್ರಶ್ನಿಸಿದ್ದಾರೆ.

“ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಇನ್ನಷ್ಟು ಆಕ್ಷೇಪಾರ್ಹವಾಗಿದೆ. ಈ ನಿರ್ಧಾರದ ವಿರುದ್ಧ ನಮ್ಮ ತೀವ್ರ ವಿರೋಧವನ್ನು ಈ ಮೂಲಕ ದಾಖಲಿಸುತ್ತೇವೆ. ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿಯಾಗಿದೆ. ಈ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ ಅವರನ್ನು ನೇಮಿಸಲು ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ. ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ” ಎಂದಿದ್ದಾರೆ.

“ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು” ಎಂದು ಹೇಳಿದ್ದಾರೆ.

“ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕರ್ನಾಟಕದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ. ಈ ಕಂಪನಿಯು ಕನ್ನಡಿಗರ ಗುರುತನ್ನು ಪ್ರತಿನಿಧಿಸುವ ಮತ್ತು ಸ್ಥಳೀಯ ಸಂಸ್ಕೃತಿಯನ್ನು ಗೌರವಿಸುವ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ತಮನ್ನಾ ಭಾಟಿಯಾ ಅವರ ನೇಮಕವು ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆ ತರುವಂತಿದ್ದು, ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆಯನ್ನು ಆಯೋಜಿಸಲಿದೆ” ಎಂದು ಎಚ್ಚರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments