ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಪ್ರಜಾಸೌಧ ಕಟ್ಟಡದ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು ₹5 ಕೋಟಿ ಹೆಚ್ಚುವರಿ ಅನುದಾನ ನೀಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಐಟಿ ಮತ್ತು ಬಿಟಿ ಹಾಗೂ ಇ-ಆಡಳಿತ ಸಚಿವ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅಫಜಲಪುರ ತಾಲ್ಲೂಕಿನ ಜನರಿಗೆ ವಿವಿಧ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಪ್ರಜಾಸೌಧ ಕಟ್ಟಡ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. 2022ರ ಜನವರಿ 25ರಂದು ಈ ಕಟ್ಟಡ ನಿರ್ಮಾಣಕ್ಕೆ ₹10 ಕೋಟಿ ಅಂದಾಜು ವೆಚ್ಚದಲ್ಲಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು.
ಅನುದಾನದ ಕೊರತೆಯಿಂದಾಗಿ ಆರಂಭದಲ್ಲಿ ಅನುಮೋದಿತ ಯೋಜನೆಯಡಿ ಮೂರು ಹಂತಗಳ ಕಾಮಗಾರಿಗಳನ್ನು ಮಾತ್ರ ಗುತ್ತಿಗೆದಾರರಿಗೆ ವಹಿಸಲಾಗಿತ್ತು. ಕಟ್ಟಡದ ಎರಡನೇ ಮತ್ತು ಮೂರನೇ ಮಹಡಿಗಳ ನಿರ್ಮಾಣ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನದ ಅಗತ್ಯವಿದ್ದ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ₹5 ಕೋಟಿ ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ನೀಡಿದೆ.
ಈಗಾಗಲೇ ಮಂಜೂರಾಗಿರುವ ₹10 ಕೋಟಿ ಹಾಗೂ ಹೊಸದಾಗಿ ಒದಗಿಸಲಾಗುತ್ತಿರುವ ₹5 ಕೋಟಿ ಸೇರಿದಂತೆ ಅಫಜಲಪುರ ತಾಲ್ಲೂಕು ಪ್ರಜಾಸೌಧ ಕಟ್ಟಡದ ಒಟ್ಟು ಅಂದಾಜು ವೆಚ್ಚ ₹15 ಕೋಟಿಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ತಾಲ್ಲೂಕು ಮಟ್ಟದ ವಿವಿಧ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸುವುದರಿಂದ ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಲು ಅನುಕೂಲವಾಗಲಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರು ಸರ್ಕಾರಿ ಕೆಲಸಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದರ ಜೊತೆಗೆ ಆಡಳಿತಾತ್ಮಕ ಕಾರ್ಯಕ್ಷಮತೆಯೂ ಹೆಚ್ಚಲಿದೆ.
ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ. ತಾಲ್ಲೂಕು ಮಟ್ಟದಲ್ಲಿ ಉತ್ತಮ ಆಡಳಿತಾತ್ಮಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಜನರಿಗೆ ಸರ್ಕಾರಿ ಸೇವೆಗಳನ್ನು ಜನಸ್ನೇಹಿಯಾಗಿ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


