ಕರ್ನಾಟಕದಿಂದ ರಾಜ್ಯಸಭೆಗೆ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಆಲಿ ಖಾನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಮತ್ತು ಹಲವಾರು ಸಚಿವರು ಈ ವೇಳೆ ಇದ್ದರು.
ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದು, ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ಸಂಸತ್ತಿನ ಮೇಲ್ಮನೆಯಲ್ಲಿ ಅವರ ಅವಧಿ ಜೂನ್ 25 ರಂದು ಕೊನೆಗೊಳ್ಳಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗಲಿದ್ದು, ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದೆ.


