ಒಳಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪುನ್ನು ನಾವು ಸ್ವಾಗತಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ 15 ದಿನಗಳ ಒಳಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕೋರಲಾಗಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಮಾಜಿ ಸಚಿವ ಹೆಚ್ ಆಂಜನೇಯ, ಮಾಜಿ ಸಂಸದರಾದ ಎಲ್ ಹನುಮಂತಯ್ಯ ಅವರ ಜೊತೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
“ಒಳ ಮೀಸಲಾತಿ ಜಾರಿ ಕುರಿತು ಸಿಎಂ, ಡಿಸಿಎಂ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯದಕ್ಕೆ ಒಳಮೀಸಲಾತಿ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಿದೆ” ಎಂದು ಹೇಳಿದ್ದಾರೆ.
“2023ನೇ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ತನ್ನ ಪ್ರಾಣಾಳಿಕೆಯಲ್ಲಿ ನ್ಯಾ. ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಲು ಭರವಸೆ ನೀಡಿತ್ತು. ಅದರಂತೆ ಸಿದ್ದರಾಮಯ್ಯ ಅವರು ಒಳಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.
“ಒಳಮೀಸಲಾತಿ ಕಲ್ಪಿಸುವ ಕುರಿತು ನ್ಯಾ. ಎ ಜೆ ಸದಾಶಿವ ಆಯೋಗದ ಶಿಫಾರಸ್ಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಇತ್ತಿಚೀನ ಬೆಳವಣಿಗೆಗಳನ್ನು ಪರಿಗಣನಿಗೆ ತೆಗೆದುಕೊಂಡು ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು”ಎಂದಿದ್ದಾರೆ.