ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್‌ವೊಂದು ಕರ್ನೂಲ್ ಜಿಲ್ಲೆಯ ಚಿನ್ನತೆಕುರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ 3.30ರ ಸುಮಾರಿಗೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿಗೆ ಆಹುತಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಬಸ್ ಅವಘಡ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಆಂಧ್ರಪ್ರದೇಶದ ಸಿಎಂ ಎನ್ ಚಂದ್ರಬಾಬು ನಾಯ್ಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದಾರೆ.
ಪ್ರಸ್ತುತ ದುಬೈಗೆ ಅಧಿಕೃತ ಭೇಟಿಯಲ್ಲಿರುವ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ, ಅವರು ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿದರು. ಉನ್ನತ ಆಡಳಿತ ಸಿಬ್ಬಂದಿಗೆ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ನೋಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.
ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಮತ್ತು ಮೃತರ ಕುಟುಂಬಗಳಿಗೆ ಬೆಂಬಲ ನೀಡಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೆಚ್ಚಿನ ಸಾವುನೋವುಗಳನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳುವ ಅಗತ್ಯವನ್ನು ಹೇಳಿದ್ದು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ.
ಸಚಿವರಾದ ಬಿ.ಸಿ. ಜನಾರ್ದನ ರೆಡ್ಡಿ ಮತ್ತು ಕೆ. ಅಚ್ಚನ್ನಾಯ್ಡು ಕೂಡ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.


