ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನಕ್ಕೆ ಕ್ರಮ ವಹಿಸಲಾಗುವುದು” ಎಂದರು.
“ಬೇರೆ ರಾಜ್ಯಗಳಲ್ಲಿನ ಹಾಲಿನ ದರಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಜೊತೆಗೆ ಮೇವುನ ದರ ಮತ್ತು ಹೈನುಗಾರಿಕೆ ನಿರ್ವಹಣಾ ವೆಚ್ಚ ಅಧಿಕವಾಗಿದ್ದು ಇದಕ್ಕೆ ಹೋಲಿಸಿದರೆ ಹಾಲಿನ ದರ ಏರಿಕೆ ಮಾಡಿರುವುದು ಕಡಿಮೆಯೇ ಇದೆ. ಹೈನುಗಾರಿಕೆ ಮಾಡುವ ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಸ್ಪಷ್ಟನೆ ನೀಡಿದರು.
“ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪರಿಸರ ಉಳಿಸಲು ಆರಂಭಿಸಿರುವ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದ್ದಾಗಿ” ತಿಳಿಸಿದರು.
“ಸ್ಮಾರ್ಟ್ ಮೀಟರ್ ಖರೀದಿಯನ್ನು ಟೆಂಡರ್ ಪ್ರಕ್ರಿಯೆ ಮೂಲಕ ನಡೆಸಲಾಗಿದ್ದು, ಈ ಬಗ್ಗೆ ಇಂಧನ ಸಚಿವರು ಸದನದಲ್ಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ತೊಡಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.