ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆ ಪ್ರಕ್ಷುಬ್ಧಗೊಂಡಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನನ್ನು ಕೊಲೆ ಮಾಡಲಾಗಿದೆ.
ಅಬ್ದುಲ್ ರಹಿಮಾನ್ ಮೃತ ದುರ್ದೈವಿ. ಮರಳು ಅನ್ಲೋಡ್ ಮಾಡುವಾಗ ಅಬ್ದುಲ್ ರಹಿಮಾನ್ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಇದೇ ವೇಳೆ ಅಬ್ದುಲ್ ರಹಿಮಾನ್ ಜೊತೆಗಿದ್ದ ಕಲಂಧರ್ ಎಂಬುವರ ಮೇಲೂ ದಾಳಿ ಮಾಡಲಾಗಿದ್ದು, ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಬ್ದುಲ್ ರಹೀಮ್ ಹತ್ಯೆಗೆ ಗುಂಡೂರಾವ್ ಖಂಡನೆ
ಮಂಗಳೂರಿನ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ DG &IGP ಹಾಗೂ ಕಾನೂನು ಸುವ್ಯವಸ್ಥೆ ADGP ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದರು.
ಮಂಗಳೂರು ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೆ ಮಾತನಾಡಿದ ಸಚಿವರು, “ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದರು. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ” ನೀಡಿದರು.