ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆಯ ನೆನಪಿನಲ್ಲಿ ಸೆ.30ರಿಂದ ರಾಜ್ಯದಲ್ಲಿ ‘ಭಾರತ್ ಜೋಡೋ ಯಾತ್ರೆ 2.0’ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದರು.
ಇಂದಿರಾಗಾಂಧಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು 2022ರ ಸೆ.7ರಂದು ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದರು. ಸೆ.30ರಂದು ಕರ್ನಾಟಕದ ಗುಂಡ್ಲುಪೇಟೆಯಿಂದ ಯಾತ್ರೆ ಆರಂಭಿಸಿ, ಅ.21ರವರೆಗೆ 11 ಜಿಲ್ಲೆಗಳಲ್ಲಿ ಸುಮಾರು 600 ಕಿ.ಮೀ. ಪಾದಯಾತ್ರೆ ನಡೆಸಿ ಜನಸಾಮಾನ್ಯರನ್ನು ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಿದ್ದರು ಎಂದರು.
ಮಹಾತ್ಮಾ ಗಾಂಧಿ ಅವರ ಪಾದಯಾತ್ರೆಯ ಬಳಿಕ ದೇಶದಲ್ಲಿ ನಡೆದ ಸುದೀರ್ಘ ಪಾದಯಾತ್ರೆಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಪ್ರಮುಖವಾದದ್ದು ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರು ಸಂಚರಿಸಿದ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 29 ಜಿಲ್ಲೆಗಳಲ್ಲಿ ‘ಭಾರತ್ ಜೋಡೋ ಯಾತ್ರೆ 2.0’ ನಡೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಪಕ್ಷ ಸೋತಿರುವ 84 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಯಾತ್ರೆ ನಡೆಯಲಿದ್ದು, ಒಟ್ಟು 84 ದಿನಗಳ ಕಾಲ ಪಾದಯಾತ್ರೆ ನಡೆಸಲಾಗುವುದು. ಮಧ್ಯಾಹ್ನ 1 ಗಂಟೆಯಿಂದ ಸಂಜೆವರೆಗೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಶಿಕಾರಿಪುರದಿಂದ ಯಾತ್ರೆಗೆ ಚಾಲನೆ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಿಂದ ‘ಭಾರತ್ ಜೋಡೋ ಯಾತ್ರೆ 2.0’ ಆರಂಭಿಸಲಾಗುವುದು. ಸಚಿವರಾದ ಮಧು ಬಂಗಾರಪ್ಪ, ರುದ್ರಪ್ಪ ಲಮಾಣಿ, ಜಮೀರ್ ಅಹ್ಮದ್ ಖಾನ್, ಬಿ.ಎಲ್. ಶಂಕರ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಅ.4-5ರಿಂದ ರಾಜ್ಯದ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಹರಿಪ್ರಸಾದ್ ಹೇಳಿದರು.
ಶಿಕಾರಿಪುರದಿಂದಲೇ ಯಾತ್ರೆ ಆರಂಭಿಸುತ್ತಿರುವುದರ ಕುರಿತು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಕ್ಷೇತ್ರದಿಂದಲೇ ಬಿಜೆಪಿಯ ನ್ಯೂನ್ಯತೆಗಳನ್ನು ಜನರಿಗೆ ತಿಳಿಸುವುದು ಹಾಗೂ ಚುನಾವಣಾ ಆಯೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವಾಗಿದೆ ಎಂದು ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾಜಿ ಎಂಎಲ್ಸಿ ನಾರಾಯಣಸ್ವಾಮಿ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಉಪಸ್ಥಿತರಿದ್ದರು


