ಇತ್ತೀಚೆಗೆ ಲಿಂಗೈಕ್ಯರಾದ ಮಾಜಿ ಸಚಿವ ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಗೌರವಾರ್ಥ ಫೆ.14ರ ಶನಿವಾರ ಸಂಜೆ ನುಡಿನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ವಿವರ ನೀಡಿದ ಅವರು, “ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಬೆಂಗಳೂರು ಅರಮನೆ ಆವರಣದ ಗೇಟ್ 4ರಲ್ಲಿರುವ ಗಾಯತ್ರಿ ವಿಹಾರದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದ್ದು, ಸುತ್ತೂರು ಸಂಸ್ಥಾನದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯರು, ಸಿದ್ದಗಂಗಾಮಠದ ಸಿದ್ದಲಿಂಗ ಮಹಾಸ್ವಾಮೀಜಿ, ಭಾಲ್ಕಿ ಹಿರೇಮಠದ ಡಾ. ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಲಿದ್ದಾರೆ” ಎಂದು ತಿಳಿಸಿದರು.
“ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಭಾಧ್ಯಕ್ಷರಾದ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಎಂ. ವೀರಪ್ಪಮೊಯ್ಲಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನುಡಿನಮನ ಸಲ್ಲಿಸಲಿದ್ದಾರೆ” ಎಂದು ಹೇಳಿದರು.
“ರಾಜ್ಯ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಹಾಸಭಾದ ವಿವಿಧ ರಾಜ್ಯ ಘಟಕಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.
ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಡಾ.ಭೀಮಣ್ಣ ಖಂಡ್ರೆ ಅವರು ಸಭಾಕ್ಕೆ ಸ್ವಂತ ನಿವೇಶನ ಖರೀದಿಸಿ, ಭವ್ಯ ಕಟ್ಟಡ ನಿರ್ಮಿಸಿ ಸಭಾ ಸ್ವಾವಲಂಬಿಯಾಗುವಂತೆ ಮಾಡಿದ್ದರು. ಸಮಾಜಕ್ಕೆ ಭೀಮಣ್ಣ ಖಂಡ್ರೆ ಅವರು ನೀಡಿರುವ ಕೊಡುಗೆ ಅಪಾರವಾಗಿದ್ದು, ಸಮಾಜದ ಎಲ್ಲ ಬಾಂಧವರೂ ಈ ನುಡಿನಮನ ಕಾರ್ಯಕ್ರಮದಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಹೇಳಿದರು.
ಡಾ. ಭೀಮಣ್ಣ ಖಂಡ್ರೆ ಅವರು ಲಿಂಗೈಕ್ಯರಾದ ಸಂದರ್ಭದಲ್ಲಿ ಭಾಲ್ಕಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆದಿತ್ತು. ಈಗ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನುಡಿನಮನ ಹಮ್ಮಿಕೊಳ್ಳಲಾಗಿದೆ ಎಂದೂ ತಿಳಿಸಿದರು.


