Homeಕರ್ನಾಟಕಕುಮಾರಸ್ವಾಮಿಗೆ ಬಿಗ್​ ರಿಲೀಫ್, ಎಸ್‌ಐಟಿ ತನಿಖೆಗೆ ಹೈಕೋರ್ಟ್​​ ತಡೆ

ಕುಮಾರಸ್ವಾಮಿಗೆ ಬಿಗ್​ ರಿಲೀಫ್, ಎಸ್‌ಐಟಿ ತನಿಖೆಗೆ ಹೈಕೋರ್ಟ್​​ ತಡೆ

ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಎಸ್‌ಐಟಿ ನೇಮಕ ರದ್ದುಪಡಿಸುವಂತೆ ಕೋರಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಎ.ವಿ.ನಿಶಾಂತ್ ವಾದ ಮಂಡಿಸಿದ್ದು, ಅಧಿಸೂಚನೆಯಿಲ್ಲದೇ ಎಸ್ಐಟಿ ರಚನೆ ಕಾನೂನುಬಾಹಿರ. ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಮನವಿ ಮಾಡಿದರು. ಕುಮಾರಸ್ವಾಮಿ ಪರ ವಕೀಲರ ವಾದ ಮನ್ನಿಸಿದ ನ್ಯಾಯಪೀಠ ಎಸ್‌ಐಟಿ ನೇಮಕ ಆದೇಶಕ್ಕೆ ಮುಂದಿನ ವಿಚಾರಣೆತನಕ ಮಧ್ಯಂತರ ತಡೆ ನೀಡಿತು. ಸರ್ಕಾರದ ಪರ ವಕೀಲರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಬಳಿಯ ಸುಮಾರು 14 ಎಕರೆ ಸರಕಾರಿ ಭೂಮಿಯ ಅನಧಿಕೃತ ಒತ್ತುವರಿ ತೆರವುಗೊಳಿಸುವ ಸಂಬಂಧ ಸರಕಾರ ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲಾಗಿತ್ತು. ರಾಮನಗರ ಜಿಲ್ಲೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಮಾಜ ಪರಿವರ್ತನಾ ಸಮುದಾಯವು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. 2020ರಲ್ಲಿ ಲೋಕಾಯುಕ್ತ ವರದಿ ಅನುಸಾರ ಕ್ರಮ ಕೈಗೊಳ್ಳಲು ಹೈಕೋರ್ಟ್ ಆದೇಶಿಸಿತ್ತು. ಆದರೆ, ಸರ್ಕಾರ ಕ್ರಮ ಕೈಗೊಳ್ಳದ ಕಾರಣ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಎಸ್‌ಐಟಿ ರಚಿಸಿತ್ತು.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments