ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಈ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ.
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಮಧ್ಯಾಹ್ನ 2 ಗಂಟೆ ಟ್ರೆಂಡ್ ಪ್ರಕಾರ, ಹರಿಯಾಣದಲ್ಲಿ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದು, 3ನೇ ಬಾರಿಗೆ ಅಧಿಕಾರಕ್ಕೆ ಬರುವ ಸೂಚನೆ ಸಿಕ್ಕಿದೆ. ಕಾಂಗ್ರೆಸ್ 34, ಐಎನ್‌ಎಲ್‌ಡಿ 2 ಮತ್ತು ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಎಎಪಿ ಶೂನ್ಯ ಸಂಪಾದನೆ
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿರುವ ಎಎಪಿ 88 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿತ್ತು. ಆದರೆ ಒಂದೂ ಸ್ಥಾನವನ್ನು ಗೆಲ್ಲದೇ ಶೂನ್ಯ ಸಂಪಾದನೆ ಮಾಡಿದೆ. ಪಕ್ಷದ ಸಾಧನೆಯಿಂದ ಅರವಿಂದ್ ಕೇಜ್ರಿವಾಲ್ ಅವರಿಗೆ ಮುಖಭಂಗವಾದಂತಾಗಿದೆ.
ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಕುರುಕ್ಷೇತ್ರದ ಜ್ಯೋತಿಸರ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಅವರು ಲಾಡ್ವಾ ವಿಧಾನಸಭಾ ಕ್ಷೇತ್ರದಿಂದ 16,054 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ವಿನೇಶ್ ಫೋಗಟ್ ಗೆಲುವು
ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ರಾಜಕೀಯ ಅಖಾಡದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಸಹ ಬಿಜೆಪಿ ನಾಯಕ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಜಮ್ಮು ಕಾಶ್ಮೀರ: ಕಾಂಗ್ರೆಸ್ ಮೈತ್ರಿ ಸರ್ಕಾರ
ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಫಲಿತಾಂಶ ಬಹುತೇಕ ಅಂತಿಮಗೊಂಡಿದ್ದು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ವರೆನ್ಸ್ ಮೈತ್ರಿಕೂಟ ಸರ್ಕಾರ ರಚನೆಗೆ ಅಂತಿಮ ತಯಾರಿಯನ್ನು ನಡೆಸಿದೆ. ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ವರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ.