ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಟಾರ್ಗೆಟ್ ಮಾಡಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, “ಸಿಎಂ ಸಿದ್ದರಾಮಯ್ಯ ಬದಲಾವಣೆ ಸಾಧ್ಯವೇ ಇಲ್ಲ. ಸಿದ್ದರಾಮಯ್ಯರೇ ಸಿಎಂ ಆಗಿ ಮುಂದುವರೆಯುತ್ತಾರೆ” ಎಂದರು.
“ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ಆರೋಪ ಸಾಬೀತಾಗಿಲ್ಲ. ಸಿದ್ದರಾಮಯ್ಯರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಹೀಗಾಗಿ ಹೈಕಮಾಂಡ್ ಸಿಎಂ ಬೆನ್ನಿಗೆ ನಿಲ್ಲಬೇಕು. ಮುಂದೆ ತೆಲಂಗಾಣ ಸಿಎಂಗೂ ಸಮಸ್ಯೆ ಮಾಡುತ್ತಾರೆ. ತೆಲಂಗಾಣ ಸಿಎಂಗೂ ರಾಜ್ಯಪಾಲರು ನೋಟಿಸ್ ನೀಡಬಹುದು. ರಾಜ್ಯಪಾಲರಿಂದ ನೋಟಿಸ್ ಕೊಟ್ಟು ಕೆಳಗೆ ಇಳಿಸಲು ಯತ್ನಿಸುತ್ತಾರೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ” ಎಂದು ಆರೋಪಿಸಿದರು.
“ಇನ್ನು ಪಕ್ಷ ಸಂಘಟನೆಯ ವಿಚಾರ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಚರ್ಚಿಸಿದ್ದೇವೆ. ಬೆಳಗಾವಿ ಡಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚಿಸಲಾಗಿದೆ” ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.