ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಜೆಡಿಎಸ್‍ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ. ಚರ್ಚೆಯಿಂದ ವಿಷಯ ಬಗೆಹರಿಯಲಿದೆ” ಎಂದರು.
“ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡ ಅವರ ಜೊತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಎಚ್ ಡಿ ಕುಮಾರಸ್ವಾಮಿ ಅವರಿಗೂ ಬೆಳಿಗ್ಗೆ ಮಾಹಿತಿ ನೀಡಿದ್ದೇನೆ” ಎಂದು ಹೇಳಿದರು.
ಜೆಡಿಎಸ್ ಅಸಮಾಧಾನ
ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಜೆಡಿಎಸ್ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಮುಖಂಡರು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೆಗೌಡರು ಹಾಗೂ ಮಾಜಿ ಸಿಎಂ, ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ.