ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಶನಿವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡುವ ಮೂಲಕ ಹೆಂಡತಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿ ತಲೆಮರೆಸಿಕೊಂಡಿದ್ದರು.
ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ದೂರು ದಾಖಲಿಸಿದ್ದರು.
ದೂರು ದಾಖಲಾಗುತ್ತಿದ್ದಂತೆ ಪೊಲೀಸರಿಂದ ಮುನಿರತ್ನ ತಲೆಮರೆಸಿಕೊಂಡು ಬೆಂಗಳೂರಿನಲ್ಲೇ ಓಡಾಡುತ್ತಿದ್ದರು.
ಗುತ್ತಿಗೆದಾರ ಚಲುವರಾಜು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಮುನಿರತ್ನ ಬೆಂಗಳೂರಿನಿಂದ ಪರಾರಿಯಾಗಿದ್ದರು.
ಆದರೆ, ಮುನಿರತ್ನ ಚಲನವಲನ ಬಗ್ಗೆ ನಿಗಾ ಇರಿಸಿದ್ದ ಬೆಂಗಳೂರಿನ ಪೊಲೀಸರು, ಮುನಿರತ್ನ ಅವರ ಮೊಬೈಲ್ ಲೋಕೇಶನ್ ಟ್ರ್ಯಾಕ್ ಮಾಡಿ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದಾರೆ. ಮುನಿರತ್ನ ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.