ಬೋಯಿಂಗ್ ಸಂಸ್ಥೆಯ 43 ಎಕರೆ ವಿಶಾಲವಾದ ಪ್ರದೇಶದಲ್ಲಿ ನಿರ್ಮಿಸಿರುವ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ ಹಾಗೂ ವಿಮಾನ ಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಬೋಯಿಂಗ್ ಸುಕನ್ಯಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
“ಕರ್ನಾಟಕ ರಾಜ್ಯವು ದೇಶದ ಏರೋಸ್ಪೇಸ್ ವಲಯದಲ್ಲಿ ಪ್ರಾಬಲ್ಯವನ್ನು ಸಾಧಿಸಿದ್ದು, ಏರೋಸ್ಪೇಸ್ ಮತ್ತು ಡಿಫೆನ್ಸ್ ರಫ್ತಿನ ಶೇ. 65 ರಷ್ಟು ಪಾಲನ್ನು ಹೊಂದಿದೆ” ಎಂದರು.
“ಬೋಯಿಂಗ್ ಸಂಸ್ಥೆ ಸಂಸ್ಥೆಯು, ತಂತ್ರಜ್ಞಾನದ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ ಮುಕುಟಕ್ಕೆ ಹೊಸದೊಂದು ಮಣಿ ಸೇರ್ಪಡೆಯಾದಂತಿದೆ. ಫಾರ್ಚೂನ್ 500 ಕಂಪೆನಿಗಳಲ್ಲಿ 400 ಕ್ಕೂ ಹೆಚ್ಚು ಕಂಪೆನಿಗಳ ನೆಲೆಯಾಗಿರುವ ನಮ್ಮ ರಾಜ್ಯವು, ಸಂಶೋಧನೆ ಮತ್ತು ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿರುವುದಲ್ಲದೆ, ಸ್ಟಾರ್ಟಪ್ ರಾಜಧಾನಿ ಎಂಬ ಕೀರ್ತಿಗೂ ಭಾಜನವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
“ಪ್ರತಿಭಾನ್ವಿತ ಉದ್ಯೋಗಿಗಳು ಹಾಗೂ ಕೌಶಲಯುಕ್ತ ಮಾನವ ಸಂಪನ್ಮೂಲ ಹೇರಳವಾಗಿರುವ ಕರ್ನಾಟಕವು ಸಹಜವಾಗಿಯೇ ತಂತ್ರಜ್ಞಾನ ಹಾಗೂ ಜ್ಞಾನಾಧಾರಿತ ಉದ್ಯಮಗಳ ಮೊದಲ ಆಯ್ಕೆಯಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ನಮ್ಮ ಸರ್ಕಾರ ಹೊಂದಿರುವ ಬದ್ಧತೆಯನ್ನು ಪುನರುಚ್ಛರಿಸಬಯಸುತ್ತೇನೆ. ಈ ನಿಟ್ಟಿನಲ್ಲಿ ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ಹಾಗೂ ಕೈಗಾರಿಕಾ ಸ್ನೇಹಿ ನೀತಿಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ” ಎಂದು ಹೇಳಿದರು.
“ಬೋಯಿಂಗ್ ಇಂಡಿಯಾದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಆವರಣದ ಈ ಉದ್ಘಾಟನಾ ಸಮಾರಂಭವು ಜಾಗತಿಕ ಮಟ್ಟದಲ್ಲಿ ವಿಮಾನಯಾನ ವಲಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವ ಆಶಯಕ್ಕೆ ಪುಷ್ಟಿ ನೀಡುವಂತಿದೆ. ಬೋಯಿಂಗ್ ಸಂಸ್ಥೆಯು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಈ ಪ್ರದೇಶವನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತೋಷ ನೀಡಿದೆ. ಈ ಭಾಗವು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿ ಹೊಸ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲು ಮುನ್ನುಡಿ ಬರೆದಿದೆ” ಎಂದರು.
“ಬೋಯಿಂಗ್‌ನ ಈ ಹೊಸ ಉಪಕ್ರಮದಿಂದಾಗಿ ಸ್ಥಳೀಯ ಪ್ರತಿಭಾವಂತರಿಗೆ ಜಾಗತಿಕ ಮಟ್ಟದ ಯೋಜನೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಲಿದೆ. ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಎಲ್ಲರ ಒಳಗೊಳ್ಳುವಿಕೆ ಹಾಗೂ ಎಲ್ಲರಿಗೂ ತಂತ್ರಜ್ಞಾನದ ಲಾಭ ದೊರಕುವಂತಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಮಹಿಳೆಯರ ಅಭ್ಯುದಯ ಹಾಗೂ ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಬೆಂಬಲ ನೀಡುತ್ತಾ ಬಂದಿದೆ” ಎಂದು ತಿಳಿಸಿದರು.
“ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ ಬೋಯಿಂಗ್ ಸುಕನ್ಯಾ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವುದು ಸಂತೋಷ ನೀಡಿದೆ. ಇದು ಕೇವಲ ಬೋಯಿಂಗ್ ಸಂಸ್ಥೇಗೆ ಮಾತ್ರವಲ್ಲ, ನಮ್ಮ ನಾಡಿಗೂ ಹೆಮ್ಮೆಯ ವಿಷಯವಾಗಿದೆ. ನಿಮ್ಮ ಭವಿಷ್ಯದ ಯೋಜನೆಗಳಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಕಾರ ನೀಡುತ್ತದೆ. ಎಲ್ಲ ಉಪಕ್ರಮಗಳು ಬೋಯಿಂಗ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯಕ್ಕೆ ನಾವೀನ್ಯತೆ, ಅಭಿವೃದ್ಧಿ ಹಾಗೂ ಸಮೃದ್ಧಿಯ ಮೂಲಕ ಉಜ್ವಲ ಭವಿಷ್ಯ ರೂಪಿಸುವಂತಾಗಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದರು.