ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ.
ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು.
ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.
ಬಜೆಟ್ ಅಧಿವೇಶನ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆ ತಿರಸ್ಕರಿಸಿ, ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.
(ಫೆ.14) ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.
ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದರು.
ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.