ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊನೆಗೂ ಗೆದ್ದಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್, “ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ” ಎಂದರು.
“ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿದೆ. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನು ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ” ಎಂದು ಹೇಳಿದರು.
ಇತ್ತೀಚೆಗೆ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಮನವಿ ಸಲ್ಲಿಸಿದ್ದರು. ಸಚಿವ ಸಂಪುಟದಲ್ಲಿ ತೀರ್ಮಾನಿಸಿ ನಿರ್ಧಾರ ಕೈಗೊಳ್ಳಲಾಗುದು ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಆ ಪ್ರಕಾರ ಇಂದು ಮರುನಾಮಕರಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರವಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ನಾನು ಮತ್ತೆ ಅಧಿಕಾರಕ್ಕೆ ಬಂದು ಬದಾಲದ ಹೆಸರನ್ನು ಕಿತ್ತೊಗೆಯುತ್ತೇನೆ” ಎಂದು ಗುಡುಗಿದ್ದನ್ನು ಇಲ್ಲಿ ನೆನೆಯಬಹುದು.