ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರನ್ಯಾ ರಾವ್ ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿಪೋಸಾ ಕಾಯ್ದೆ-1974) ಅನ್ವಯ ಬಂಧನದ ಆದೇಶ ಹೊರಡಿಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಅನ್ವಯ ಆರೋಪಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ.
ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯ (ಕಾಫಿಫೋಸಾ) 3(1) ಸೆಕ್ಷನ್ ಅಡಿಯಲ್ಲಿ ರನ್ಯಾ ವಿರುದ್ಧ ಸಿಇಐಬಿ ಜಂಟಿ ಕಾರ್ಯದರ್ಶಿ ಅನುಪಮ್ ಪ್ರಕಾಶ್ ಏಪ್ರಿಲ್ 22ರಂದು ಬಂಧನ ಆದೇಶ ಹೊರಡಿಸಿದ್ದಾರೆ.
ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ನಂತರ ಕಳ್ಳಸಾಗಾಣಿಕೆಯಲ್ಲಿ ತೊಡಗುವುದನ್ನು ತಡೆಯುವ ಸಲುವಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆರೋಪಿಯು ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸದಿರುವುದು ಕಂಡುಬಂದರೆ ಈ ಕಾಯ್ದೆಯನ್ನು ಸಹ ಅನ್ವಯಿಸಲಾಗುತ್ತದೆ.
ಪ್ರಕರಣದಲ್ಲಿ ರನ್ಯಾ ರಾವ್ ಮತ್ತು ಇತರರು ಜಾಮೀನು ಪಡೆಯಲು ಪದೇ ಪದೇ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿವೆ ಎನ್ನಲಾಗಿದೆ. ಇತರ ಆರೋಪಿಗಳಾದ ತರುಣ್ ರಾಜು ಮತ್ತು ಸಾಹಿಲ್ ಸಕರಿಯಾ ಜೈನ್ ವಿರುದ್ಧವೂ ಕೋಫೆಪೋಸಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.
ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್‌ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.