ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿಯ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಗೆ ಆಗಮಿಸಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.
ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ತೇಜೋವಧೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಪೋಸ್ಟ್ ಶೇರ್ ಮಾಡಿರುವ ಆರೋಪದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ನೂರಾರು ಪೋಲಿಸರು ಅವರ ನಿವಾಸಕ್ಕೆ ಆಗಮಿಸಿದ್ದರು.
ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೇಸ್ಬುಕ್ ಪೇಜ್ನಲ್ಲಿ ವಿಡಿಯೊ ಮಾಡಿ ಮಹೇಶ್ ಶೆಟ್ಟಿ ಅವರು ಸಂತೋಷ್ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ 196(1), 352, 353(2) ಬಿಎನ್ಸ್ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸ್ ಠಾಣಾ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಸೂಚಿಸಿದ್ದರು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ಬೆಳಿಗ್ಗೆ ನೂರಾರು ಪೊಲೀಸರು ಬಂಧಿಸಲು ಆಗಮಿಸಿದ್ದರು.