ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವೆ. ಇದರಲ್ಲಿ ಯಾವ ಅನುಮಾನವೂ ಇಲ್ಲ. ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ತಿಳಿಸಿದರು.
ಮದ್ದೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಮುಂದೆ ಎಲ್ಲ ವಿಷಯ ತಿಳಿಸುತ್ತೇನೆ’ ಎಂದಷ್ಟೇ ಹೇಳಿದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಮಾತನಾಡಿ, “ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.
“ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು” ಎಂದರು.