ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ (ಸಂತ್ರಸ್ತೆಯ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಲಂಗ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಕಾಣುತ್ತಿದ್ದಂತೆ ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಕೆಲವು ದಿನಗಳ ಮಟ್ಟಿಗೆ ರಾಜಕೀಯವಾಗಿಯೂ ಸದ್ದು ಮಾಡಿತ್ತು.
ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.