ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್‌ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ.
ಶುಕ್ರವಾರ ರಾಜಭವನಕ್ಕೆ ತೆರಳಿ ಸಚಿವ ಎಂ ಬಿ ಪಾಟೀಲ್ ವಿರುದ್ಧ ದೂರು ಸಲ್ಲಿಸಿದ್ದು, “ಎಂಬಿ ಪಾಟೀಲ್ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.
“ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ . ಇವರ ಕೆಲಸಗಳಿಗೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಈ ಅಕ್ರಮ ಹಂಚಿಕೆಯಿಂದ ಕೆಐಎಡಿಬಿಗೆ ಕೋಟ್ಯಂತರ ರೂ. ನಷ್ಟವಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದಿನೇಶ್ ಕಲ್ಲಹಳ್ಳಿ ಹಿನ್ನೆಲೆ
ಕನಕಪುರ ಸಮೀಪದ ಕಲ್ಲಹಳ್ಳಿಯ ದಿನೇಶ್ ಈ ಹಿಂದೆ ಹಲವು ವಾರಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ನಂತರ ಮಾಹಿತಿ ಹಕ್ಕು ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ರಿಯಾಶೀಲರಾದ ದಿನೇಶ್ ಪ್ರಮುಖ ವಕೀಲರ ಸಂಪರ್ಕ ಸಾಧಿಸಿಕೊಂಡು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ದೂರುದಾರರಾಗಿದ್ದಾರೆ. ಕನಕಪುರ ತಾಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್ ವಿರುದ್ಧ ದೂರು ನೀಡಿ ಪೊಲೀಸರ ರಕ್ಷಣೆಯನ್ನು ದಿನೇಶ್ ಕೋರಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ವಿಡಿಯೋ ನನ್ನ ಬಳಿ ಇದೆ. ಜೊತೆಗೆ ಆಗಿನ ಮೂವರು ಸಚಿವರ ಸೆಕ್ಸ್ ಹಗರಣದ ವಿಡಿಯೋ ಇದೆ ಎಂದು ಕಲ್ಲಹಳ್ಳಿ ಹೇಳಿದ್ದರು.