Homeಕರ್ನಾಟಕಮಾಜಿ ಮುಖ್ಯಮಂತ್ರಿ ಎಸ್ ​ಎಂ ಕೃಷ್ಣ ನಿಧನ, ಪಿಎಂ, ಸಿಎಂ ಸೇರಿ ಗಣ್ಯರ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್ ​ಎಂ ಕೃಷ್ಣ ನಿಧನ, ಪಿಎಂ, ಸಿಎಂ ಸೇರಿ ಗಣ್ಯರ ಸಂತಾಪ

ರಾಜ್ಯ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿ.10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​ ​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಿಂದಲೂ ಪದವಿ ಪಡೆದಿದ್ದರು.

1962ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ಇದರ ಬೆನ್ನಲ್ಲೇ ಪ್ರಜಾ ಸೋಷಿಯಲಿಸ್ಟ್ ಪಕ್ಷವನ್ನು ಸೇರಿದ ಎಸ್.ಎಂ. ಕೃಷ್ಣ 1968ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಸಹ ಸ್ಪರ್ಧಿಸಿ ವಿಜಯಶಾಲಿಯಾದರು.  ಬಳಿಕ ಕಾಂಗ್ರೆಸ್‌ಗೆ  ಸೇರ್ಪಡೆಗೊಂಡ ಎಸ್.ಎಂ. ಕೃಷ್ಣ 1971ರ ಮಂಡ್ಯ ಲೋಕಸಭಾ ಕ್ಷೇತ್ರದ ಮರು ಚುನಾವಣೆಯಲ್ಲೂ ಗೆಲುವಿನ ನಗೆ ಬೀರಿದರು. 1983-84ರ ನಡುವೆ ಇಂದಿರಾಗಾಂಧಿ ಸರ್ಕಾರದಲ್ಲಿ ಹಾಗೂ 1984-85ರ ಅವಧಿಯಲ್ಲಿ ರಾಜೀವ್ ಗಾಂಧಿ ಸರ್ಕಾರದಲ್ಲಿ ಕೈಗಾರಿಕೆ ಮತ್ತು ಹಣಕಾಸು ರಾಜ್ಯ ಸಚಿವರಾಗಿಯೂ ಎಸ್.ಎಂ. ಕೃಷ್ಣ ಸೇವೆ ಸಲ್ಲಿಸಿದ್ದರು. 

ಪಿಎಂ, ಸಿಎಂ ಸೇರಿ ಗಣ್ಯರ ಸಂತಾಪ

ದೇಶದ ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಖಾತೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,” ಎಸ್‌ ಎಂ ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು” ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ ತಾಣದಲ್ಲಿ ಸಂತಾಪ ಸೂಚಿಸಿದ್ದು, “ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ” ಎಂದು ತಿಳಿಸಿದ್ದಾರೆ.

ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರ್ಕಾರ

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ನಿಧನದ ಹಿನ್ನೆಲೆ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments