ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ಷೇಪಿಸಿದರು.
ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗಿಯಾಗಿ, “ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕಾಂಗ್ರೆಸ್ ಸರಕಾರದ ವಿರುದ್ಧ ಒಂದು ಸಾಂಕೇತಿಕ ಪ್ರತಿಭಟನೆ” ಇದು ಎಂದು ವಿಜಯೇಂದ್ರ ತಿಳಿಸಿದರು.
“ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ, ದಾಳಿ ಮಾಡಿದ್ದ, ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸುಗಳನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಿಂದಕ್ಕೆ ಪಡೆದಿದೆ. ಹುಬ್ಬಳ್ಳಿ ಘಟನೆ ವಿಷಯದಲ್ಲಿ ಎನ್‍ಐಎ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಎಂದು ಯಾವ ಮಟ್ಟಕ್ಕೆ ಹೋಗಲು ಕೂಡ ಕಾಂಗ್ರೆಸ್ ಸರಕಾರ ಹೇಸುವುದಿಲ್ಲ” ಎಂದು ದೂರಿದರು.
“ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ. ಸಿದ್ದರಾಮಯ್ಯನವರು ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಎಂದು ನಿಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಂದ ಹೇಳಿಸಿ ನೋಡೋಣ” ಎಂದು ವಿಜಯೇಂದ್ರರು ಸವಾಲೆಸೆದರು.
“ಈ ಸರಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದೆ. ಇದರ ಬಗ್ಗೆ ಜನರು ಚರ್ಚಿಸುತ್ತಿದ್ದಾರೆ. ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಲೂಟಿ ಮಾಡಿದೆ. ಎಸ್‍ಇಪಿ, ಟಿಎಸ್‍ಪಿ ಹಣ ದುರುಪಯೋಗದ ಕುರಿತು ಜನರು ಚರ್ಚೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಯೇ ಇಲ್ಲವಾಗಿದೆ” ಎಂದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕ ವಿಶ್ವನಾಥ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು