ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳು ಪಿತ್ರಾರ್ಜಿತ ಆಸ್ತಿಯಲ್ಲಿ 50% ಸರ್ಕಾರ ಪಡೆಯಬೇಕು ಎಂಬ ಪಿತ್ರೊಡಾ ಅವರ ಹೇಳಿಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದರು.
“ಇದು ಭಾರತ. ಈ ಬಗ್ಗೆ ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದರು.
“ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ” ಎಂದು ತಿಳಿಸಿದರು.
ಸೋಲಿನ ಅರಿವಾಗಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಸುಳ್ಳಿನ ಟೀಕೆ
“ಪ್ರಧಾನಮಂತ್ರಿಗಳು ಹತಾಶೆ ಹೇಳಿಕೆ ನೀಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅವರ ಪಕ್ಷದ ನೆಲೆ ಇಲ್ಲ. ಹೀಗಾಗಿ ಆಂಧ್ರದಲ್ಲಿ ಟಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಅವರ ಸರ್ಕಾರ ಇಲ್ಲ. ಕರ್ನಾಟಕದಲ್ಲೂ ಅವರು ಎರಡಂಕಿ ಸ್ಥಾನ ಪಡೆಯಲ್ಲ. ಹೀಗಾಗಿ ಹತಾಶೆಯಿಂದ ಮಂಗಳಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಮೋದಿ ಅವರು ಪ್ರಧಾನಿ ಆದಾಗ 2,800 ರೂಪಾಯಿ ಇದ್ದ ಒಂದು ಗ್ರಾಂ ಚಿನ್ನ ಈಗ 7,500 ಆಗಿದೆ. ನಮ್ಮ ಮಹಿಳೆಯರು ಮಂಗಳಸೂತ್ರ ಹಾಕಲಾಗದಂತೆ ಬಿಜೆಪಿಯವರು ಬೆಲೆ ಏರಿಕೆ ಮಾಡಿದ್ದಾರೆ. ಈ ವಿಚಾರವಾಗಿ ನಾನು ನಮ್ಮ ಪಕ್ಷಕ್ಕೆ ಒಂದು ಸಲಹೆ ನೀಡುತ್ತಿದ್ದೇನೆ. ನಮ್ಮ ದೇಶ, ಧರ್ಮ ಕಾಪಾಡಿಕೊಳ್ಳಬೇಕು” ಎಂದರು.
“ಪ್ರಿಯಾಂಕ ಗಾಂಧಿ ಅವರು ಬೆಂಗಳೂರಿನಲ್ಲಿ ನನ್ನ ತಾಯಿ ದೇಶಕ್ಕಾಗಿ ತನ್ನ ಮಾಂಗಲ್ಯಸೂತ್ರ ತ್ಯಾಗ ಮಾಡಿದ್ದಾರೆ ಎಂದು ನೋವಿನಿಂದ ಹೇಳಿದ್ದಾರೆ. ಇದನ್ನು ಮೋದಿ ಅವರು ಅರಿತುಕೊಳ್ಳಬೇಕು. ಅವರ ಸ್ಥಾನದ ಬಗ್ಗೆ ನಮಗೆ ಗೌರವವಿದೆ. ಜನ ಅವರಿಗೆ ಹತ್ತು ವರ್ಷಗಳ ಕಾಲ ಅವಕಾಶ ಮಾಡಿಕೊಟ್ಟಿದ್ದಾರೆ. ಜನ ಕೊಟ್ಟಿರುವ ಗೌರವವನ್ನು ಕಾಪಾಡಿಕೊಳ್ಳಬೇಕು. ಈ ರೀತಿ ದೇಶಕ್ಕೆ ಅಪಮಾನ ಮಾಡಬಾರದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡಂಕಿ ಸ್ಥಾನ ಪಡೆಯಲಿದೆ. ಹೀಗಾಗಿ ಬಿಜೆಪಿ ಅವರು ಸುಳ್ಳಿನ ಕಾರ್ಖಾನೆ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ನಮ್ಮ ಪ್ರಣಾಳಿಕೆ ಬಗ್ಗೆ ಗೊತ್ತಿಲ್ಲ ” ಎಂದು ಹೇಳಿದರು.