Homeಕರ್ನಾಟಕಕೆ ಎನ್ ರಾಜಣ್ಣ, ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಕೆ ಎನ್ ರಾಜಣ್ಣ, ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಸಹಕಾರ ಸಚಿವ ಕೆ ಎನ್ ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದಾರೆ.

ಕಾಂಗ್ರೆಸ್​​ನ 10 ಕಾರ್ಯಕರ್ತರು ದೂರು ಪತ್ರ ಬರೆದಿದ್ದು, “ಸಚಿವ ಕೆಎನ್​ ರಾಜಣ್ಣ ಅವರು ಪದೇ ಪದೇ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತಾಡುತ್ತಿದ್ದಾರೆ. ಅನವಶ್ಯಕವಾಗಿ ಡಿಸಿಎಂ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗಾಗಿ ಕೆ ಎನ್​​ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡಬೇಕು” ಎಂದು ಆಗ್ರಹಿಸಿದ್ದಾರೆ.

“ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕೂಡ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದೆ. ಅವರ ಇತ್ತೀಚಿನ ಹೇಳಿಕೆಗಳು ಮತ್ತು ನಡವಳಿಕೆಯು ಪಕ್ಷಕ್ಕೆ ಹಿನ್ನಡೆ ಉಂಟುಮಾಡುತ್ತಿದೆ. ಪಕ್ಷ ಸಂಘಟನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 18ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ. ಕೆಲವು ಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುತ್ತಿದ್ದು ಶಿಸ್ತು ಕ್ರಮ ಜರುಗಿಸುವಂತೆ ಮನವಿ ಮಾಡುತ್ತಿದ್ದೇವೆ” ಎಂದು ಎಐಸಿಸಿ ನಾಯಕರಿಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ತಂದರು. ಕಾಂಗ್ರೆಸ್ ಸರಕಾರ ನೀಡಿದ ಐದು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೀಡುತ್ತಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಸರ್ಕಾರ ನೀಡಿದ ಹಲವು ಯೋಜನೆಗಳು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪುತ್ತಿದ್ದು, ಇದನ್ನು ಹೆಚ್ಚಿನ ರೀತಿಯಲ್ಲಿ ತಲುಪಿಸಲು ಕೆಲವು ಸಚಿವರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಇಬ್ಬರು ಸಚಿವರ ಹೇಳಿಕೆ ಪಕ್ಷಕ್ಕೆ ಮುಜುಗರ ತರುತ್ತಿದೆ” ಎಂದಿದ್ದಾರೆ.

“ಸಚಿವರ ಔತಣಕೂಟಗಳ ಹೆಸರಿನಲ್ಲಿ ಪದೇ ಪದೇ ರಾಜಕೀಯ ಮಾಡುವುದು ಅತ್ಯಂತ ಕೆಟ್ಟ ಅಭ್ಯಾಸ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುವ ಇಂತಹ ಚಟುವಟಿಕೆಗಳನ್ನು ಕಾಂಗ್ರೆಸ್ ಪಕ್ಷ ಸಹಿಸಬಾರದು. ಕೆ.ಎನ್.ರಾಜಣ್ಣ ಅವರು ಸಚಿವರಾದ ನಂತರ ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ” ಎಂದು ದೂರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments