ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾಗಿದ್ದಾರೆ ಎನ್ನುವ ಆರೋಪ ಕೇಳಿವರುತ್ತಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು.
ಒಂದು ವಾರದ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಬುಧವಾರ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೆ ಓರ್ವ ಬಾಣಂತಿ ಸಾವನ್ನಪ್ಪಿದ್ದಾಳೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಿಎಸ್‌ಪುರ ಗ್ರಾಮದ ಮಹಾಲಕ್ಷ್ಮಿ (20) ಎಂಬ ಗರ್ಭಿಣಿ, ರವಿವಾರ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದರು. ಬಳಿಕ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿಯೇ ಮಹಾಲಕ್ಷ್ಮಿಗೆ ನಾರ್ಮಲ್ ಹೆರಿಗೆ ಮಾಡಲಾಗಿತ್ತು. ಆದರೆ ಹೆರಿಗೆ ಬಳಿಕ ತೀವ್ರ ರಕ್ತ ಸ್ರಾವ ಹಾಗೂ ನಂಜಾಗಿ ಬಾಣಂತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ.
ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ
ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು ಘಟನೆಯನ್ನು ಗಂಭೀರ ವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.
“ಈ ಹಿಂದೆ ಜಿಲ್ಲಾ ಆಸ್ಪತ್ರೆ ಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು” ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದ್ದಾರೆ.