ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿದೆ. ಈ ವೇಳೆ ಕಾರ್ಖಾನೆಯಲ್ಲಿ 150 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಸುಮಾರು 90 ಮಂದಿ ಸ್ಫೋಟ ನಡೆದ ಸ್ಥಳದ ಸಮೀಪದಲ್ಲೇ ಇದ್ದರು ಎಂದು ಕಾರ್ಖಾನೆಯ ಮೂಲಗಳನ್ನು ಉಲ್ಲೇಖಿಸಿ ಐಜಿಪಿ ವಿ.ಸತ್ಯನಾರಾಯಣ ಹೇಳಿದ್ದಾರೆ.
ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಬಿದ್ದಿದ್ದರು. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಎಲ್ಲೆಡೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಕಾರ್ಖಾನೆಯೊಳಗಿನ ಸ್ಫೋಟದಿಂದಾಗಿ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ.
ಕೇಂದ್ರದಿಂದ ₹2 ಲಕ್ಷ ಪರಿಹಾರ
ಪ್ರಧಾನಿ ನರೇಂದ್ರ ಮೋದಿ ಅವರು ದುರಂತಕ್ಕೆ ಶೋಕ ವ್ಯಕ್ತಪಡಿಸಿ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹ 50 ಸಾವಿರ ನಗದು ಪರಿಹಾರ ಘೋಷಿಸಿದ್ದಾರೆ.
ಘಟನೆಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.