Homeಕರ್ನಾಟಕಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಡಿಸಿಎಂ ಡಾ. ಜಿ.ಪರಮೇಶ್ವರ

ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಡಿಸಿಎಂ ಡಾ. ಜಿ.ಪರಮೇಶ್ವರ

ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಆಡಳಿತದಲ್ಲಿ ನಿರ್ಲಕ್ಷ್ಯ ಹಾಗೂ ಅನಗತ್ಯ ವಿಳಂಬವನ್ನು ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವಿಕಾಸಸೌಧದಲ್ಲಿ ಇಂದು ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕೆಲವು ಜಿಲ್ಲೆಗಳು ಉತ್ತಮ ಸಾಧನೆ ಮಾಡಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಹಿಂದುಳಿದ ಜಿಲ್ಲೆಗಳಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಅಧಿಕಾರಿಗಳು ಕೇವಲ ಪ್ರಗತಿ ವರದಿ ಸಲ್ಲಿಸುವುದಕ್ಕೆ ಸೀಮಿತವಾಗದೆ, ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಸಾಧಿಸಬೇಕು ಎಂದು ಸೂಚಿಸಿದರು.

ಬರ ಪರಿಸ್ಥಿತಿ: ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ

ಸೂಪರ್ ಎಲ್‌ನೀನೋ ಪರಿಣಾಮದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವುದು ಆತಂಕಕಾರಿ. ಬರವನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಆದರೂ ರೈತರು ಸಂಕಷ್ಟದಲ್ಲಿದ್ದು, ಕೃಷಿ ಉತ್ಪಾದನೆ ಕುಂಠಿತಗೊಂಡರೆ ಅದರ ಪರಿಣಾಮ ಇತರ ಕ್ಷೇತ್ರಗಳ ಮೇಲೂ ಉಂಟಾಗಲಿದೆ ಎಂದು ಹೇಳಿದರು.

ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಉತ್ತಮ ಬೆಳೆ ಬಂದಿರುವ ವರದಿಗಳಿಲ್ಲ. ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಹೀಗಾಗಿ ಬರದಿಂದ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲಾಗಿರುವ ಪರಿಣಾಮವನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ

ಬರ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲು ಈಗಾಗಲೇ ಸೂಚಿಸಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಮರ್ಪಕ ಅನುಷ್ಠಾನವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಮೇವಿನ ಬೀಜದ ಕಿಟ್‌ಗಳ ವಿತರಣೆಗೆ ಹೆಚ್ಚುವರಿಯಾಗಿ ₹30 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಬರ ಪರಿಹಾರ ವಿತರಣೆಯಲ್ಲಿ ವಿಳಂಬ ಸಲ್ಲದು

ಬರದಿಂದ ಸಂಕಷ್ಟಕ್ಕೀಡಾಗಿರುವ ಅರ್ಹ ರೈತರಿಗೆ ತಲಾ ₹5,000 ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಈವರೆಗೂ ಪರಿಹಾರ ವಿತರಣೆ ಪೂರ್ಣಗೊಂಡಿಲ್ಲ. ಪರಿಹಾರ ಘೋಷಿಸಿ ಎರಡು ತಿಂಗಳು ಕಳೆದರೂ ರೈತರ ಖಾತೆಗಳಿಗೆ ಹಣ ಜಮೆಯಾಗದಿರುವುದು ಸರಿಯಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸರ್ಕಾರದ ಘೋಷಣೆಗಳು ಕೇವಲ ಪ್ರಕಟಣೆಗಳಿಗೆ ಸೀಮಿತವಾಗಬಾರದು. ಅವು ಕಾರ್ಯರೂಪಕ್ಕೆ ಬಂದು ಜನರಿಗೆ ಪ್ರಯೋಜನ ತಲುಪಬೇಕು. ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಹಣ ತಲುಪಿಸುವಲ್ಲಿ ಯಾವುದೇ ವಿಳಂಬವಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಡವರಿಗೆ 15 ಲಕ್ಷ ನಿವೇಶನ ವಿತರಣೆಗೆ ಆದ್ಯತೆ

ಬಡವರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಬಡವರಿಗೆ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಉದ್ದೇಶಕ್ಕಾಗಿ ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನು ಗುರುತಿಸಲಾಗಿದೆ ಎಂದು ತಿಳಿಸಿದರು.

ಅರ್ಹ ಫಲಾನುಭವಿಗಳನ್ನು ಗುರುತಿಸುವುದು, ಜಮೀನಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಹಾಗೂ ನಿವೇಶನ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಿಂಚಣಿ ಫಲಾನುಭವಿಗಳ ಅರ್ಹತೆ ಪರಿಶೀಲಿಸಿ

ರಾಜ್ಯದಲ್ಲಿ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಆರಂಭಿಕ ಹಂತದಲ್ಲಿಯೇ ಹೆಚ್ಚಿನ ಎಚ್ಚರಿಕೆ ವಹಿಸಬೇಕಿತ್ತು. ಪಿಂಚಣಿಗೆ ಅರ್ಹರಾಗಿರುವವರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಸರ್ಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನದಲ್ಲಿಯೂ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆ ಇರಬೇಕು. ಜನರಿಗೆ ಯೋಜನೆಗಳ ನೈಜ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸುವ ಮೂಲಕ ಆಡಳಿತದ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಬೇಕು ಎಂದು ಡಾ. ಜಿ. ಪರಮೇಶ್ವರ ನಿರ್ದೇಶನ ನೀಡಿದರು.

ಸಭೆಯಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೃಷಿ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್‌ಚಂದ್ರ, ಕಂದಾಯ ಆಯುಕ್ತೆ ಮೀನಾ ನಾಗರಾಜ್, ಭೂಮಾಪನ ಮತ್ತು ಭೂದಾಖಲೆಗಳ ಆಯುಕ್ತ ರಾಕೇಶ್ ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಆಯುಕ್ತ ಎಂ.ಎನ್. ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments