ಬಳ್ಳಾರಿ ಜಿಲ್ಲೆಯ ಸಂಡೂರು ರಾಜಮನೆತನದ ವಂಶಸ್ಥರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿ. ಎಂ.ವೈ. ಘೋರ್ಪಡೆ ಅವರ ಪುತ್ರ ಕಾರ್ತಿಕ ಘೋರ್ಪಡೆ ನಿಧನರಾಗಿದ್ದಾರೆ.
ಇವರು ಮೂಲತಃ ಕಾಂಗ್ರೆಸ್ ಪಕ್ಷದವರಾಗಿದ್ದರು. ಆದರೆ 2018ರ ವಿಧಾನಸಭಾ ಚುನಾವಣೆಗೂ ಮುನ್ನ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಸಂಡೂರು ರಾಜವಂಶಸ್ಥರು, ಜನಪ್ರಿಯ ನಾಯಕರು, ಆತ್ಮೀಯರೂ ಆಗಿದ್ದ ಶ್ರೀ ಕಾರ್ತಿಕ್ ಘೋರ್ಪಡೆ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.
“ಸಾರ್ವಜನಿಕ ಜೀವನ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಇನ್ನೂ ಚಿಕ್ಕ ವಯಸ್ಸಿನಲ್ಲಿಯೇ ಹಠಾತ್ ವಿಧಿವಶರಾಗಿರುವುದು ಸಾರ್ವಜನಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಎಲ್ಲ ಸದಸ್ಯರಿಗೆ, ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಎಕ್ಸ್ ಖಾತೆಯಲ್ಲಿ ಸಂತಾಪ ನುಡಿಗಳನ್ನು ಬರೆದುಕೊಂಡಿದ್ದಾರೆ.


