ರಾಜ್ಯ ಸರ್ಕಾರದಿಂದ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವ ಸಮಾರಂಭದಲ್ಲಿ ಕಲಬುರಗಿಯ ಪೊಲೀಸ್ ಪರೇಡೆ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
“ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃಧ್ಧಿ ಅಸಾಧ್ಯ. ಇಲ್ಲಿನ ಜನರ ತಲಾದಾಯ ವೃದ್ಧಿ ಜೊತೆಗೆ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗುರಿಯಾಗಿದೆ. ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಬದ್ಧರಾಗಿ ದೃಢಸಂಕಲ್ಪ ಮಾಡುವುದರ ಮೂಲಕ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ” ಎಂದು ಕರೆ ನೀಡಿದರು.
“ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯು 5,000 ಕೋಟಿ ರೂ. ಮೊತ್ತಕ್ಕೆ ಸಲ್ಲಿಸಿದ ಕ್ರಿಯಾ ಯೋಜನೆಗೆ ನಮ್ಮ ಸರ್ಕಾರ ಈಗಾಗಲೆ ಅನುಮೋದನೆ ನೀಡಿದ್ದು, ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಕ್ರಾಂತಿ ನಿರೀಕ್ಷಿಸಲಾಗಿದೆ” ಎಂದರು.
“ಕೆ.ಕೆ.ಆರ್.ಡಿ.ಬಿ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ 180 ಕೋಟಿ ರೂ.ಗಳನ್ನು ಒದಗಿಸಿ ಮೆಟ್ರಿಕ್ ಪೂರ್ವ- ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆ.ಕೆ.ಆರ್.ಡಿ.ಬಿ. ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಸುಮಾರು 180 ಕೋಟಿ ರೂಗಳ ವೆಚ್ಚದಲ್ಲಿ ಮೌಲಾನ ಆಜಾದ್ ಮಾದರಿ ಶಾಲೆಗಳು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ- ಮೆಟ್ರಿಕ್ ನಂತರದ ವಸತಿ ನಿಲಯಗಳ ನಿರ್ಮಾಣ ಮಾಡಲಾಗುತ್ತಿದೆ” ಎಂದು ಹೇಳಿದರು.
1 ಲಕ್ಷ ಉದ್ಯೋಗ ಸೃಷ್ಟಿ
“ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ತಾಲೂಕಿನ ನದಿಸಿನ್ನೂರ-ಹೊನ್ನಕಿರಣಗಿ ಬಳಿ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸಟೈಲ್ ಪಾರ್ಕ್‍ನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದ್ದು, ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಠಿಯಾಗಲಿದೆ” ಎಂದು ತಿಳಿಸಿದರು.
“ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಹಾಗೂ ಗುಣಾತ್ಮಕವಾಗಿ ಅಭಿವೃದ್ಧಿ ಪಡಿಸಲು ಹಾಗೂ ಸಮಗ್ರ ಗ್ರಾಮೀಣಾಭಿವೃದ್ಧಿ ಮಾಡುವ ಧ್ಯೇಯದೊಂದಿಗೆ “ಕಲ್ಯಾಣ ಪಥ” ಯೋಜನೆಯನ್ನು ರೂಪಿಸಲಾಗಿದೆ. ಈ ಭಾಗದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ 1,000 ಕೋಟಿ ರೂ. ವೆಚ್ಚದಲ್ಲಿ 1,150 ಕಿ.ಮೀ. ರಸ್ತೆಗಳನ್ನು ನಿರ್ಮಿಸಲಿದೆ” ಎಂದರು.
“10 ವರ್ಷಗಳ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಯ ನಂತರ ಇಂದು ಸಂಜೆ ಕಲಬುರಗಿಯಲ್ಲಿ ಅತ್ಯಂತ ಮಹಾತ್ವಾಕಾಂಕ್ಷೆಯ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ. ಸದರಿ ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ, ಪ್ರವಾಸೋದ್ಯಮ ಅಭಿವೃದ್ಧಿ, ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ತಿಳಿಸಿದರು.