ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ.
ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ಶುಕ್ರವಾರ ರಾತ್ರಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಹತ್ಯೆಗೀಡಾದ ಫೈರೋಜ್ ಪಠಾಣ್ ಅವರು ಧಾರವಾಡದ ಮುಂಚೂಣಿಯ ಯುವ ನಾಯಕರಾಗಿದ್ದರು. ಆರಂಭದಲ್ಲಿ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.
ವೈಯಕ್ತಿಕ ದ್ವೇಷ, ರಾಜಕೀಯ ವೈರತ್ವ ಮತ್ತು ಇತರ ವಿವಾದಗಳು ಸೇರಿದಂತೆ ಎಲ್ಲಾ ಕೋನಗಳಿಂದ ಪರಿಶೀಲಿಸುತ್ತಿದ್ದಾರೆ , ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


