ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಸಚಿವ, ಹಾಲಿ ಸಂಸದ ಪ್ರಲ್ಹಾದ್ ಜೋಶಿ ಅವರನ್ನು ಗುರಿಯಾಗಿಸಿಕೊಂಡು, ಲಿಂಗಾಯತ ಸಮುದಾಯಕ್ಕೆ ಜೋಶಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ, ನಾಮಪತ್ರ ಸಲ್ಲಿಸಿದ್ದರು.
ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ನುಡಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಹಠವನ್ನು ಬದಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಧಾರವಾಡದ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದು, ಅವರ ಜೊತೆ ಜೊತೆ ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ನಾಮಪತ್ರ ವಾಪಸ್ ಪಡೆಯುವುದು ಬಹುತೇಕ ಖಚಿತವಾಗಿದೆ.
ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದರೆ ಪ್ರಲ್ಹಾದ್ ಜೋಶಿ ಹಾಗೂ ವಿನೋದ್ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ. ಜೊತೆಗೆ ಜೋಶಿಗೂ ರಿಲೀಫ್ ಸಿಕ್ಕಂತಾಗುತ್ತದೆ.