ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ
ಡಾ.ಸಿ ಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಬುಧವಾರ ಸಂಜೆ (ಮಾ.13) ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಮಂಜುನಾಥ್ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದು, ಗುರುವಾರ (ಮಾ.14)ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಸಿ ಎನ್ ಮಂಜುನಾಥ್ ಅವರು ಕೆಲ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಚುನಾವಣಾ ತಯಾರಿ ನಡೆಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕಿಳಿಯುತ್ತಿರುವ ಅವರು ಅಧಿಕೃತವಾಗಿ ಬಿಜೆಪಿ ಚಿಹ್ನೆ ಮೇಲೆ ಸ್ಪರ್ಧಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ನೇತೃತ್ವದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿಯಿಂದ ಇನ್ನೂ ಅಧಿಕೃತವಾಗಿ ಟಿಕೆಟ್ ಘೋಷಣೆ ಆಗಿಲ್ಲದಿದ್ದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಂಜುನಾಥ್ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ವಿರುದ್ಧ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಮೊನ್ನೆ ಶಿವರಾತ್ರಿ ದಿನದಂದು ಮತ್ತೀಕೆರೆಯ ಜೆಪಿ ಪಾರ್ಕ್ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಜುನಾಥ್ ಅವರು ವೇದಿಕ ಮೇಲೆ ಕಾಣಿಸಿಕೊಂಡಿದ್ದರು.