ಕೊಡಗು ಜೆಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ಮಂಡ್ಯ ತಾಲೂಕಿನ ಶಿವಳ್ಳಿ ನಿವಾಸಿಯಾಗಿರುವ ಡಾ.ಸತೀಶ್ ಮೃತ ವೈದ್ಯ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಸತೀಶ್ ಹೆಸರು ಕೇಳಿಬಂದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಾ.ಸತೀಶ್ನನ್ನು ವಿಚಾರಣೆಗೆ ಕರೆದಿದ್ದರು. ಹೀಗಾಗಿ ಕಾರಿನಲ್ಲಿಯೇ ಇಂಜೆಕ್ಷನ್ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರಾಗಿ ಕೆಲಸಮಾಡುತ್ತಿದ್ದರು. ಹಲವು ವರ್ಷಗಳಿಂದ ಶಿವಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಡಾ.ಸತೀಶ್, ಆಲೆಮನೆಗೆ ಆರೋಗ್ಯ ಸಚಿವರು ಭೇಟಿ ನೀಡಿದ್ದಾಗ ಸ್ಥಳೀಯರು ಸತೀಶ್ ಬಗ್ಗೆ ಮಾಹಿತಿ ನೀಡಿದ್ದರು. ಡಾ.ಸತೀಶ್ ವಿಚಾರಣೆ ಮಾಡುವಂತೆ ಆರೋಗ್ಯ ಸಚಿವರು ಹೇಳಿದ್ದರು.
ಸದ್ಯ ವೈದ್ಯ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.