ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಅವರ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದ್ದು, ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
2023ರ ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (KOMUL) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರು ವಲಯ ಕಚೇರಿಯ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಶಾಸಕ ಕೆ ವೈ ನಂಜೇಗೌಡ ಮತ್ತು ಇತರರ 1.32 ಕೋಟಿ ರೂ. (ಅಂದಾಜು) ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.
ಸರ್ಕಾರಿ ಜಮೀನು ಮಂಜೂರಾತಿ ಪ್ರಕರಣವೊಂದರ ತನಿಖೆಯ ಭಾಗವಾಗಿ ನಂಜೇಗೌಡ ಅವರ ಮನೆಯಲ್ಲಿ ಶೋಧ ನಡೆಸಿದ್ದ ಇ.ಡಿ ಅಧಿಕಾರಿಗಳು, 2023ರಲ್ಲಿ ಕೋಮುಲ್‌ನ ವಿವಿಧ ಹುದ್ದೆಗಳಿಗೆ ನಡೆಸಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ತಿಳಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ಜತೆಗೆ ಕರ್ನಾಟಕ ಲೋಕಾಯುಕ್ತಕ್ಕೂ ಪತ್ರ ಬರೆದಿದ್ದರು.
ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೋಮುಲ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿತ್ತು. ಅಭ್ಯರ್ಥಿಗಳ ಒಎಂಆರ್ ಶೀಟ್‌ಗಳನ್ನು ತಿದ್ದಿ, ತಮ್ಮ ಶಿಫಾರಸಿನವರಿಗೆ ನೇಮಕಾತಿ ನೀಡಿ ಎಂದು ನಂಜೇಗೌಡ ಅವರು ಕೋಮುಲ್ ಅಧಿಕಾರಿಗಳಿಗ ತಾಕೀತು ಮಾಡಿದ್ದರು. ಈ ಅಕ್ರಮದಲ್ಲಿ ಕೋಮುಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ ಭಾಗಿಯಾಗಿದ್ದರು ಎಂದು ಇ.ಡಿ ಹೇಳಿತ್ತು.