ವಿಕ್ರಂ ಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂ ಗೌಡ ಅವರು ಎನ್‌ಕೌಂಟರ್‌ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬುಧವಾರ (ನ.20) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
“ವಿಕ್ರಂ ಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂ ಗೌಡ ಅವರನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ರೂ. ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು” ಎಂದು ವಿವರಿಸಿದರು.
13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮೂಲಕ ಹತ್ಯೆ ಮಾಡಲಾಗಿದೆ.
ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.